ADVERTISEMENT

ಅತ್ಯಾಚಾರ ಪ್ರಕರಣ: ಮುನಿರತ್ನ ಕಸ್ಟಡಿಗೆ ಪಡೆಯಲು ಎಸ್‌ಐಟಿ ಸಿದ್ಧತೆ

ನ್ಯಾಯಾಂಗ ಬಂಧನದಲ್ಲಿರುವ ಶಾಸಕ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 0:30 IST
Last Updated 23 ಸೆಪ್ಟೆಂಬರ್ 2024, 0:30 IST
ಮುನಿರತ್ನ
ಮುನಿರತ್ನ   

ಬೆಂಗಳೂರು: ‘ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಚಾರಣೆಗೆ ತಮ್ಮ ಕಸ್ಟಡಿಗೆ ಪಡೆಯಲು ಸಿಐಡಿಯ ವಿಶೇಷ ತನಿಖಾ ದಳ(ಎಸ್‌ಐಟಿ) ಸಿದ್ಧತೆ ನಡೆಸಿದೆ’ ಎಂದು ಮೂಲಗಳು ತಿಳಿಸಿವೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಸಂಬಂಧ ಮುನಿರತ್ನ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದಕ್ಕೂ ಮೊದಲು ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಪ್ರಕರಣಗಳೂ ಸೇರಿ ಒಟ್ಟು ಮೂರು ಪ್ರಕರಣಗಳ ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖಾಧಿಕಾರಿಗಳು ಸಿದ್ಧತೆ ಆರಂಭಿಸಿದ್ದಾರೆ. ಸಿಐಡಿ (ಆರ್ಥಿಕ ಅಪರಾಧಗಳು) ಎಡಿಜಿಪಿ ಬಿ.ಕೆ.ಸಿಂಗ್‌ ನೇತೃತ್ವದ ಎಸ್‌ಐಟಿ ರಚಿಸಲಾಗಿದ್ದು, ಮೂವರು ಐಪಿಎಸ್‌ ಅಧಿಕಾರಿಗಳು ತಂಡದ ಸದಸ್ಯರಾಗಿದ್ದಾರೆ.

‘ಬಾಡಿ ವಾರಂಟ್‌ ಮೇಲೆ ಆರೋಪಿಯನ್ನು ಕಸ್ಟಡಿಗೆ ಪಡೆಯಲಾಗುವುದು. ಈ ಸಂಬಂಧ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮನವಿ ಮಾಡಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ADVERTISEMENT

‘ಕಗ್ಗಲೀಪುರ ಠಾಣೆ ಪೊಲೀಸರು ಆರೋಪಿಯ ಪ್ರಾಥಮಿಕ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನ್ಯಾಯಾಧೀಶರ ಎದುರು ಸಿಆರ್‌ಪಿಸಿ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲು ಮಾಡಲಾಗಿದೆ. ನ್ಯಾಯಾಲಯವು ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡಿದರೆ ಸ್ಥಳ ಮಹಜರು ನಡೆಸಿ, ಹೇಳಿಕೆಯನ್ನು ವಿಡಿಯೊ ರೆಕಾರ್ಡ್‌ ಮಾಡಿಕೊಳ್ಳಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಬೆದರಿಕೆ ಆರೋಪ:

ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ಕಡೆಯವರು ಸಂತ್ರಸ್ತೆ ಹಾಗೂ ಅವರ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಕಡೆಯವರು ಯಶವಂತಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.