ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿ.ಆರ್.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ತೆಲುಗು ಚಿತ್ರನಟಿ ಹೇಮಾ ಅವರಿಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ್ದ ಆರೋಪದಡಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆಯ ಬಳಿಕ ಹೇಮಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಹೇಮಾ ಅವರು ವಕೀಲರ ಮೂಲಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಬುಧವಾರ ಅರ್ಜಿ ವಿಚಾರಣೆ ನಡೆಸಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೇಮಾ ಅವರಿಂದ ಪೊಲೀಸರು ಯಾವುದೇ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಹೀಗಾಗಿ, ತಮ್ಮ ಕಕ್ಷಿದಾರರಿಗೆ ಜಾಮೀನು ಮಂಜೂರು ಮಾಡುವಂತೆ ವಕೀಲರು ಕೋರಿದರು. ನ್ಯಾಯಾಲಯ ಮನವಿ ಪುರಸ್ಕರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.