ADVERTISEMENT

ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆ: ಗೌರವ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 16:32 IST
Last Updated 20 ಜುಲೈ 2024, 16:32 IST
ಕೆಪಿಸಿಎಲ್‌ನ 55ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮಾತನಾಡಿದರು
ಕೆಪಿಸಿಎಲ್‌ನ 55ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮಾತನಾಡಿದರು   

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳು ಈ ವರ್ಷ ದಾಖಲೆಯ ವಿದ್ಯುತ್‌ ಉತ್ಪಾದನೆ ಮಾಡಿದ್ದರಿಂದ ರಾಜ್ಯದಲ್ಲಿ ವಿದ್ಯುತ್‌ ಕೊರತೆ ಆಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು ಎಂದು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ತಿಳಿಸಿದರು.

ಕೆಪಿಸಿಎಲ್‌ನ 55ನೇ ಸಂಸ್ಥಾಪನಾ ದಿನಾಚರಣೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಳೆ ಕೊರತೆ ಉಂಟಾಗಿದ್ದರಿಂದ ಜಲ ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆಯಾಗಿತ್ತು. ಈ ಕೊರತೆಯನ್ನು ಉಷ್ಣ ವಿದ್ಯುತ್ ಸ್ಥಾವರಗಳು ನೀಗಿಸಿದವು. ಹಳೆಯ ಘಟಕಗಳಲ್ಲೂ ಹೆಚ್ಚು ಉತ್ಪಾದನೆ ಮಾಡುವ ಮೂಲಕ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳು ದೇಶದಲ್ಲೇ ಮೆಚ್ಚುಗೆ ಗಳಿಸಿದವು ಎಂದು ವಿವರಿಸಿದರು.

ADVERTISEMENT

ಇದೀಗ, ಬಿಡದಿಯಲ್ಲಿ ತ್ಯಾಜ್ಯದಿಂದ ವಿದ್ಯುತ್... ಹೀಗೆ ನಾನಾ ಹೊಸ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಸಂಬಂಧ ಏಳೆಂಟು ಖಾಸಗಿ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿತ್ತಾದರೂ ಯೋಜನೆ ಜಾರಿಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ. ಕೆಪಿಸಿಎಲ್ ಈ ಕಾರ್ಯದಲ್ಲಿ ಯಶಸ್ವಿಯಾಗಿದೆ. ಬಿಡದಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಉತ್ಪಾದನೆ ಪ್ರಾಯೋಗಿಕವಾಗಿ ಆರಂಭವಾಗಿದೆ ಎಂದು ತಿಳಿಸಿದರು.

‘ರಾಜ್ಯದಲ್ಲಿ32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದನ್ನು ಮುಂದಿನ ಏಳು ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಅದಕ್ಕೆ ಪೂರಕವಾಗಿ ಜಲ, ಉಷ್ಣ, ಪವನ, ಸೌರ ವಿದ್ಯುತ್ ಸೇರಿದಂತೆ ವಿವಿಧ ಮೂಲಗಳಿಂದ ಹೆಚ್ಚಿನ ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಮಾಹಿತಿ ನೀಡಿದರು

ನಿಗಮದಲ್ಲಿ 25 ವರ್ಷ ಸೇವೆ ಸಲ್ಲಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಗೌರವಿಸಲಾಯಿತು. ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಕೆಪಿಸಿಎಲ್‌ ಸಿಬ್ಬಂದಿಯ ಮಕ್ಕಳನ್ನು ಬೆಳ್ಳಿ ಪದಕ ನೀಡಿ ಪುರಸ್ಕರಿಸಲಾಯಿತು. ಕೆಪಿಸಿಎಲ್ ಹಣಕಾಸು ನಿರ್ದೇಶಕ ಆರ್. ನಾಗರಾಜ್, ತಾಂತ್ರಿಕ ನಿರ್ದೇಶಕ ಸಿ.ಎಂ. ದಿವಾಕರ್, ಮಾನವ ಸಂಪನ್ಮೂಲ ನಿರ್ದೇಶಕ ಸಿ. ನಾಗರಾಜ್, ಮುಖ್ಯ ಜಾಗೃತ ಅಧಿಕಾರಿ ಶಿವಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.