ADVERTISEMENT

ಮಳೆ: 6 ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 16:12 IST
Last Updated 19 ಜುಲೈ 2024, 16:12 IST
ಮಳೆ
ಮಳೆ   

ಬೆಂಗಳೂರು: ರಾಜ್ಯದಲ್ಲಿ ಶನಿವಾರವೂ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರಿಯುವ ಸಂಭವವಿದೆ. ಹಾಸನ ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಯಾದಗಿರಿ, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

‘ಅಲರ್ಟ್’ ನೀಡಲಾದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ADVERTISEMENT

ಭಾರಿ ಮಳೆ: ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ನಲ್ಲಿ ಅತಿಹೆಚ್ಚು (23 ಸೆಂ.ಮೀ) ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆ ಮತ್ತು ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 22 ಸೆಂ.ಮೀ., ಉತ್ತರ ಕನ್ನಡದ ಮಂಕಿಯಲ್ಲಿ 21 ಸೆಂ.ಮೀ. ಭಾರಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಉತ್ತರ ಕನ್ನಡದ ಗೇರುಸೊಪ್ಪೆಯಲ್ಲಿ 18 ಸೆಂಟಿ ಮೀಟರ್‌ ಮಳೆ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 17 ಸೆಂ.ಮೀ. ಮಳೆ ಬಂದಿದೆ. ಉಡುಪಿ, ಮಂಗಳೂರು ವಿಮಾನ ನಿಲ್ದಾಣ, ಸಿದ್ಧಾಪುರ, ಅಂಕೋಲ, ಗೋಕರ್ಣ, ಕಳಸ, ಮೂರ್ನಾಡು, ನಾಪೋಕ್ಲು, ಕೊಲ್ಲೂರು, ಕದ್ರಾ, ಕೊಪ್ಪ, ಕೋಟ, ಧರ್ಮಸ್ಥಳ, ಕುಮಟಾ, ಲಿಂಗನಮಕ್ಕಿ ಎಚ್‌ಎಂಎಸ್‌ಗಳಲ್ಲಿ 12 ಸೆಂ.ಮೀ.ನಿಂದ  16 ಸೆಂ.ಮೀ.ವರೆಗೆ ಮಳೆ ದಾಖಲಾಗಿದೆ.

ಭಾನುವಾರವೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.