ADVERTISEMENT

ದರ್ಶನ್ ಪ್ರಕರಣ: ಮೇಲ್ಮನವಿ ಸಲ್ಲಿಕೆಗೆ ಸಿದ್ಧತೆ, ಅನುಮತಿ ಕೋರಿ ಸರ್ಕಾರಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2024, 0:30 IST
Last Updated 13 ನವೆಂಬರ್ 2024, 0:30 IST
ದರ್ಶನ್‌ 
ದರ್ಶನ್‌    

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ನ್ಯಾಯಾಲಯವು ನೀಡಿರುವ ಮಧ್ಯಂತರ ಜಾಮೀನಿನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆಯೂ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

‘ಮೇಲ್ಮನವಿ ಸಲ್ಲಿಸಲು ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕು. ನಾವು ಪತ್ರ ಬರೆದಿದ್ದೇವೆ. ಅನುಮತಿ ಲಭಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಜಾಮೀನು ನೀಡುವಂತೆ ದರ್ಶನ್‌ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕಿದ ಬಳಿಕ ಜೈಲಿನಿಂದ ದರ್ಶನ್‌ ಬಿಡುಗಡೆಯಾಗಿ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ADVERTISEMENT

ತನಿಖೆ ಪ್ರಗತಿಯಲ್ಲಿದೆ: ‘ವಿಜಯನಗರದ ಅರಿಹಂತ್‌ ಚಿನ್ನಾಭರಣ ಅಂಗಡಿ ಮಾಲೀಕ ಸುರೇಂದ್ರ ಕುಮಾರ್ ಜೈನ್‌ ಅವರು ಮನೆಯಲ್ಲಿದ್ದ ₹14.75 ಕೋಟಿ ಮೌಲ್ಯದ ಚಿನ್ನಾಭರಣ, ₹40.80 ಲಕ್ಷ ನಗದು ಕಳ್ಳತನ ಪ್ರಕರಣದ ತನಿಖೆ ಪ್ರಗತಿಯಲ್ಲಿ ಇದೆ. ಸುರೇಂದ್ರ ಕುಮಾರ್ ಅವರು ಗುಜರಾತ್‌ಗೆ ಹೋಗುವಾಗ ಕೆಲಸಗಾರನಿಗೆ ಮನೆಯ ಕೀ ನೀಡಿ ತೆರಳಿದ್ದರು. ಪ್ರಕರಣದ ಸಂಬಂಧ ಕೆಲವು ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಬಿ.ದಯಾನಂದ ಹೇಳಿದರು.

‘ನಗರ ಹೊರವಲಯದ ಹೆಬ್ಬಗೋಡಿನಲ್ಲಿ ನಡೆದಿದ್ದ ರೇವ್‌ ಪಾರ್ಟಿಯ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ. ಸಿಸಿಬಿ ಪೊಲೀಸರ ವಿರುದ್ದ ತನಿಖೆ ನಡೆಸುವಂತೆ ಮಾನವ ಹಕ್ಕುಗಳ ಆಯೋಗದಿಂದ ಯಾವುದೇ ಆದೇಶ ಬಂದಿಲ್ಲ. ಲೋಕಾಯುಕ್ತಕ್ಕೆ ಆದೇಶ ನೀಡಿರಬಹುದು. ರೇವ್‌ ಪಾರ್ಟಿ ತನಿಖೆ ಪ್ರಗತಿಯಲ್ಲಿ ಇರುವಾಗಲೇ ದಿಕ್ಕು ತಪ್ಪಿಸುವ ಉದ್ದೇಶದಿಂದ ಆರೋಪಿಗಳು ಕೆಲವು ಆಪಾದನೆ ಮಾಡಿದ್ದರು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.