ಬೆಂಗಳೂರು: ‘ದಕ್ಷಿಣ ಭಾರತ ಉತ್ಸವದ ಸಂದರ್ಭದಲ್ಲಿ ಕರ್ನಾಟಕಕ್ಕೆ ₹3,750 ಕೋಟಿ ಬಂಡವಾಳ ಹರಿದು ಬಂದಿದೆ’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ–2024’ರಲ್ಲಿ ಅವರು ಮಾತನಾಡಿದರು.
‘ಕರ್ನಾಟಕವು 320 ಕಿ.ಮೀ ಉದ್ದದ ಕರಾವಳಿ ಕಡಲ ತೀರ ಹೊಂದಿದ್ದು, ಅದರಲ್ಲಿ 40 ತಾಣಗಳನ್ನು ಪ್ರವಾಸೋದ್ಯಮ ಸ್ಥಳಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಸ್ಮಾರಕಗಳಿದ್ದು, ಅದರಲ್ಲಿ 500 ಸ್ಮಾರಕಗಳನ್ನು ಮಾತ್ರ ಸರ್ಕಾರ ಸಂರಕ್ಷಿಸುತ್ತಿದೆ. ಆದ್ದರಿಂದ, ಎಲ್ಲ ಸ್ಮಾರಕಗಳ ರಕ್ಷಣೆಗೆ ದತ್ತು ಸ್ಮಾರಕ ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.
‘ಸಾಹಸ, ಶೈಕ್ಷಣಿಕ, ಕೃಷಿ, ಧಾರ್ಮಿಕ, ಪಾರಂಪರಿಕ ತಾಣಗಳ ಅಧ್ಯಯನದಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ. ರಾಜ್ಯದಲ್ಲಿರುವ ಶ್ರದ್ಧಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಒದಗಿಸಲು ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವ (ಪಿಪಿಪಿ) ಮಾದರಿಯ ಅಭಿವೃದ್ಧಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರಲ್ಲಿ ಆಸಕ್ತ ಬಂಡವಾಳ ಹೂಡಿಕೆದಾರರು ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಕರೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ರಾಜ್ಯ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ನೂತನ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು’ ಎಂದು ಹೇಳಿದರು.
‘ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು, ಸರ್ಕಾರವು ಬಲಗೊಳ್ಳುವುದರ ಜೊತೆಗೆ ಉದ್ಯೋಗ ಸೃಷ್ಟಿಯೂ ಆಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.