ಬೆಂಗಳೂರು: ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿಯನ್ನು (51) ಕಸ್ಟಡಿಗೆ ಪಡೆದಿರುವ ಸಿಐಡಿ ಅಧಿಕಾರಿಗಳು, ವಿಚಾರಣೆ ಮುಂದುವರಿಸಿದ್ದಾರೆ.
ಮೈಸೂರಿನ ವಿಜಯನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಸ್ಥಳೀಯ ನ್ಯಾಯಾಲಯದ ಮೂಲಕ ಸ್ಯಾಂಟ್ರೊ ರವಿಯನ್ನು ಕಸ್ಟಡಿಗೆ ಪಡೆದಿರುವ ಸಿಐಡಿ ಅಧಿಕಾರಿಗಳು, ಆತನನ್ನು ಬೆಂಗಳೂರಿಗೆ ಕರೆತಂದಿದ್ದಾರೆ.
ರವಿಯನ್ನು ಬೌರಿಂಗ್ ಆಸ್ಪತ್ರೆಗೆ ಗುರುವಾರ ಕರೆದೊಯ್ದಿದ್ದ ಸಿಐಡಿ ಅಧಿಕಾರಿಗಳು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಆಸ್ಪತ್ರೆ ವೈದ್ಯರು, ರಕ್ತ ಹಾಗೂ ಇತರೆ ಮಾದರಿಗಳನ್ನು ಸಂಗ್ರಹಿಸಿದರು.
‘ರವಿ ವಿರುದ್ಧದ ಆರೋಪಗಳಿಗೆ ಸಂಬಂಧಪಟ್ಟಂತೆ ಪುರಾವೆಗಳನ್ನು ಸಂಗ್ರಹಿಸಬೇಕಿದೆ. ಅದಕ್ಕೂ ಮುನ್ನ ಆರೋಪಿಯ ವಿಚಾರಣೆ ನಡೆಸಿ, ಮಾಹಿತಿ ಕಲೆಹಾಕಬೇಕಿದೆ. ಹೀಗಾಗಿ, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು’ ಎಂದು ಸಿಐಡಿ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.