ಬೆಂಗಳೂರು: ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಮಂಗಳವಾರ ಮಧ್ಯಾಹ್ನ ಬಿಡುಗಡೆಯಾದರು.
ತಮ್ಮ ಪಕ್ಷದ ಕಾರ್ಯಕರ್ತರೊಬ್ಬರಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿದ್ದ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಜಾಮೀನಿನ ಪ್ರತಿಯನ್ನು ಮಂಗಳವಾರ ಬೆಳಿಗ್ಗೆ ವಕೀಲರು ಜೈಲಿನ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಧ್ಯಾಹ್ನದ ವೇಳೆಗೆ ಸೂರಜ್ ಅವರು ಬಿಡುಗಡೆಯಾದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೂರಜ್, ‘ನಮ್ಮ ಕುಟುಂಬದವರ ವಿರುದ್ಧ ಷಡ್ಯಂತ್ರ ನಡೆಸಿ ತೇಜೋವಧೆ ಮಾಡಲಾಗಿದೆ. ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದಾರೆ. ನಾವು ಎಲ್ಲಿಗೂ ಓಡಿ ಹೋಗುವುದಿಲ್ಲ. ಧೈರ್ಯದಿಂದ ಎದುರಿಸುತ್ತೇವೆ’ ಎಂದರು.
‘ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ಮೇಲೆ ಸಂಪೂರ್ಣ ನಂಬಿಕೆಯಿದ್ದು, ಸಂಕಷ್ಟದಿಂದ ಹೊರಬರುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.