ಬೆಂಗಳೂರು: ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಅವರನ್ನು ಕಣಕ್ಕೆ ಇಳಿಸದಂತೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ಮನವೊಲಿಸುವಂತೆಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಕಣಕ್ಕೆ ಇಳಿಯುವುದು ಬಹುತೇಕ ನಿಶ್ಚಿತವಾಗಿದ್ದು, ಇದರಿಂದಾಗಿ ಎಂ.ಟಿ.ಬಿ.ನಾಗರಾಜ್ ಅವರಿಗೆ ಕಠಿಣ ಸವಾಲು ಎದುರಾಗುವ ಸಾಧ್ಯತೆ ಇರುವುದರಿಂದ ಈ ಮನವಿ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಶರತ್ ಅವರನ್ನು ಕಣದಿಂದ ಹಿಂದೆ ಸರಿಸುವ ಉದ್ದೇಶದಿಂದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು, ಅದನ್ನು ಅವರು ಒಪ್ಪಿಕೊಂಡಿಲ್ಲ.
‘ಸ್ಪರ್ಧೆಗೆ ಉಂಟಾಗಿರುವ ಅಡ್ಡಿಯನ್ನು ನಿವಾರಿಸಬೇಕು. ಇದಕ್ಕೆ ನೀವೇ ಬಚ್ಚೇಗೌಡ ಅವರ ಮನವೊಲಿಸಲು ಮಧ್ಯಸ್ಥಿಕೆ ವಹಿಸಿ. ಶರತ್ ಬಚ್ಚೇಗೌಡರಿಗೆ ಬುದ್ಧಿ ಹೇಳಿ’ ಎಂದು ನಾಗರಾಜ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ನಾಗರಾಜ್, ‘ಶರತ್ ಬಚ್ಚೇಗೌಡ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಅವರು ಈಗಾಗಲೇ ಮನೆ– ಮನೆ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರ ಮಾಡಿಕೊಳ್ಳಲಿ. ಅದಕ್ಕೂ ನನಗೂ ಸಂಬಂಧವಿಲ್ಲ. ಸುಪ್ರೀಂಕೋರ್ಟ್ ತೀರ್ಪು ಬಂದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.
‘ಬಿಜೆಪಿ ಸೇರುತ್ತೇವೆ’ ಎಂದು ಎಚ್.ವಿಶ್ವನಾಥ್ ನೀಡಿರುವ ಹೇಳಿಕೆ ಸಮರ್ಥಿಸಿಕೊಂಡ ನಾಗರಾಜ್, ‘ವಿಶ್ವನಾಥ್ ನಿಜವನ್ನೇ ಹೇಳಿದ್ದಾರೆ. ನಾವು ಬಿಜೆಪಿ ಸೇರುವ ವಿಚಾರ ಎಲ್ಲರಿಗೂ ಗೊತ್ತು. ಅದು ಈಗಾಗಲೇ ಲೋಕಾರೂಢಿಯಾಗಿರುವ ಸತ್ಯ’ ಎಂದು ಹೇಳಿದರು.
‘ಬಿಜೆಪಿ ಸರ್ಕಾರವನ್ನು ಉರುಳಿಸಲು ಬಿಡುವುದಿಲ್ಲ’ ಎಂದು ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಪ್ರಸ್ತಾಪಿಸಿದ ಅವರು, ‘ಕುಮಾರಸ್ವಾಮಿ ಮನಸ್ಸಿನಲ್ಲಿ ಇರುವ ಮಾತು ಬಾಯಿಯಲ್ಲಿ ಬಂದಿದೆ. ಅವರೇ ಹೇಳಿರುವ ಹಾಗೇ ಅವರ ಬೆಂಬಲ ಬಿಜೆಪಿಗೆ ಇದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.