ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಹಾವಿನ ನಂಜಿನ ಲಕ್ಷಣಗಳು ವ್ಯಕ್ತಿಗೆ ಕಂಡುಬಂದಲ್ಲಿ ತಕ್ಷಣ ರೋಗಿಯ ಅಥವಾ ಸಂಬಂಧಿಕರ ಒಪ್ಪಿಗೆ ಪತ್ರ ಪಡೆದು, ಕಡ್ಡಾಯವಾಗಿ ‘ಆ್ಯಂಟಿ ಸ್ನೇಕ್ ವೆನಮ್’ ಅನ್ನು ಉಚಿತವಾಗಿ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಹಾವು ಕಡಿತವನ್ನು ಅಧಿಸೂಚಿತ ರೋಗವೆಂದು ಘೋಷಿಸಲಾಗಿದೆ. ಹಾವು ಕಡಿತ ಪ್ರಕರಣಗಳಲ್ಲಿ ರೋಗಿಗಳಿಗೆ ವಿವಿಧ ಹಂತಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕಾಗುತ್ತದೆ. ಹಾವು ಕಡಿತ ಪ್ರಕರಣಗಳು ಕಂಡುಬಂದಲ್ಲಿ ಆಶಾ ಕಾರ್ಯಕರ್ತೆಯರು ತಕ್ಷಣ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ತಾಲ್ಲೂಕು ಅಥವಾ ಜಿಲ್ಲಾ ಆಸ್ಪತ್ರೆಗೆ ಉಚಿತವಾಗಿ ಆಂಬುಲೆನ್ಸ್‌ನಲ್ಲಿ ರವಾನಿಸಬೇಕು. ‘ಆ್ಯಂಟಿ ಸ್ನೇಕ್ ವೆನಮ್’ ಪಡೆದ ವ್ಯಕ್ತಿಯಲ್ಲಿ ವ್ಯತಿರಿಕ್ತ ಪ್ರತಿಕ್ರಿಯೆ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ಒದಗಿಸಬೇಕು. ಹಾವು ಕಡಿತದ ಪ್ರಕರಣ ಹಾಗೂ ಮರಣವನ್ನು ಐಎಚ್‌ಐಪಿ ಪೋರ್ಟಲ್‌ನಲ್ಲಿ ವರದಿ ಮಾಡಬೇಕು’ ಎಂದು ಹೇಳಲಾಗಿದೆ.
‘ಆರೋಗ್ಯ ಕೇಂದ್ರಗಳಲ್ಲಿ ‘ಆ್ಯಂಟಿ ಸ್ನೇಕ್ ವೆನಮ್’ ಔಷಧ ದಾಸ್ತಾನು ಇಟ್ಟುಕೊಳ್ಳಬೇಕು. ಆರೋಗ್ಯ ಕೇಂದ್ರಗಳು ಸಮೀಪದ ಹಾವು ಕಡಿತ ಚಿಕಿತ್ಸಾ ಕೇಂದ್ರಗಳ ಪಟ್ಟಿಯನ್ನು ದೂರವಾಣಿ ಸಂಖ್ಯೆ ಸಹಿತ ಸೂಚನಾ ಫಲಕದಲ್ಲಿ ಹಾಕಬೇಕು. ಹಾವು ಕಡಿತ ನಿಯಂತ್ರಣ ಹಾಗೂ ಹಾವು ಕಡಿತ ಚಿಕಿತ್ಸೆಯ ಬಗ್ಗೆ ಪೋಸ್ಟರ್‌ಗಳನ್ನು ಆಸ್ಪತ್ರೆಗಳ ತುರ್ತು ಚಿಕಿತ್ಸಾ ಕೊಠಡಿ ಹಾಗೂ ಇತರ ಸ್ಥಳಗಳಲ್ಲಿ ಹಾಕಬೇಕು’ ಎಂದು ಸೂಚಿಸಲಾಗಿದೆ.
‘ಒಂದು ವೇಳೆ ಹಾವು ಕಡಿತದಿಂದ ವ್ಯಕ್ತಿ ಮರಣ ಹೊಂದಿದಲ್ಲಿ ‘ಡೆತ್ ಆಡಿಟ್’ ಮಾಡಿ, ವಿವರವಾದ ವರದಿಯನ್ನು ಆದಷ್ಟು ಬೇಗ ಸಲ್ಲಿಸಬೇಕು. ಮಕ್ಕಳು ಹಾಗೂ ಗರ್ಭಿಣಿಯರಿಗೆ ಹಾವು ಕಡಿತ ಪ್ರಕರಣಗಳು ವರದಿಯಾದಲ್ಲಿ ಅವರಿಗೂ ‘ಆ್ಯಂಟಿ ಸ್ನೇಕ್ ವೆಮನ್’ ನೀಡಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.