ADVERTISEMENT

ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ: ಪುರುಷೋತ್ತಮ ಬಿಳಿಮಲೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಭಿಮತ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 15:18 IST
Last Updated 14 ಸೆಪ್ಟೆಂಬರ್ 2024, 15:18 IST
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ   

ಬೆಂಗಳೂರು: ‘ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಗತ್ತಿನ ಅತ್ಯುತ್ಕೃಷ್ಟ ಗ್ರಂಥಗಳಲ್ಲಿ ಒಂದಾಗಿದ್ದು, ಸಮರ್ಥ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಈ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ರಾಜ್ಯ ಸರ್ಕಾರವು ಇದೇ ಭಾನುವಾರ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಇಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಪ್ರಜಾಪ್ರಭುತ್ವವು ಮನುಕುಲ ಕಂಡುಕೊಂಡ ಅತ್ಯಂತ ಮಹತ್ವದ ಆಡಳಿತ ವ್ಯವಸ್ಥೆಯಾಗಿದ್ದು, ಈ ವ್ಯವಸ್ಥೆ ಮನುಷ್ಯನ ವೈಯಕ್ತಿಕ ವಿಕಾಸದ ಜತೆಗೆ ಸಾಮಾಜಿಕ, ಆರ್ಥಿಕ ವಿಕಾಸಕ್ಕೂ ಬಹುಮುಖ್ಯ ಕೊಡುಗೆ  ಕೊಟ್ಟಿದೆ. ರಾಜಪ್ರಭುತ್ವದ ಸಾಧನೆಗಳು ಏನೇ ಇದ್ದರೂ ಅಲ್ಲಿ ಸಮಾಜದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಿರಲಿಲ್ಲ’ ಎಂದು ತಿಳಿಸಿದರು.

‘ಸುಭದ್ರ ಸಂವಿಧಾನದ ಮೂಲಕ ನಮ್ಮ ನಾಗರಿಕ ಸಮಾಜವನ್ನು ಕಟ್ಟಿದ ನಂತರವೂ ನಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ ಹೋದಲ್ಲಿ ನಮ್ಮದು ದುರ್ಬಲ ಸಮಾಜವಾಗಿ ರೂಪುಗೊಳ್ಳುತ್ತದೆ’ ಎಂದರು. 

ADVERTISEMENT

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌, ಆಯುಕ್ತ ರಾಕೇಶ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣೀದೇವಿ ಮಾಲಗತ್ತಿ, ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಮತ್ತು ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.