ಬೆಂಗಳೂರು: ಪ್ರಣವಾನಂದ ಸ್ವಾಮೀಜಿ ವಿರುದ್ಧ ಹೇಳಿಕೆ ನೀಡಿರುವ ಕರ್ನಾಟಕ ಪ್ರದೇಶ ಈಡಿಗರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ. ತಿಮ್ಮೇಗೌಡ ಅವರು ಕ್ಷಮೆಯಾಚಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಒತ್ತಾಯಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಚ್. ಮಂಚೇಗೌಡ, ‘ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಪ್ರಣವಾನಂದ ಸ್ವಾಮೀಜಿ 70 ಲಕ್ಷ ಈಡಿಗರನ್ನು ಪ್ರತಿನಿಧಿಸುತ್ತಾರೆ. ಆದರೆ, ಕರ್ನಾಟಕ ಪ್ರದೇಶ ಈಡಿಗರ ಸಂಘ ಕೇವಲ 12 ಸಾವಿರ ಜನರನ್ನು ಪ್ರತಿನಿಧಿಸುತ್ತದೆ. ಆದ್ದರಿಂದ, ಸ್ವಾಮೀಜಿ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಂಘದ ವಿರುದ್ಧ ಕಾನೂನು ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
‘ಪ್ರಣವಾನಂದ ಸ್ವಾಮೀಜಿ ಅವರ ನಿರಂತರ ಹೋರಾಟದಿಂದ ರಾಜ್ಯದಲ್ಲಿ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ. ಆದರೆ, ತಿಮ್ಮೇಗೌಡ ಅವರು ಈಡಿಗರ ಸಂಘದ ಹೆಸರಿನಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ವೈಯಕ್ತಿವಾಗಿ ಬಳಸಿಕೊಂಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.