ಬೆಂಗಳೂರು: ವಿ.ವಿ ಪುರದ ಫುಡ್ ಸ್ಟ್ಟೀಟ್‌ಗೆ ಹೊಸ ರೂಪ ನೀಡುವ ಬಿಬಿಎಂಪಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಆಗಸ್ಟ್ ಅಂತ್ಯಕ್ಕೆ ‘ತಿಂಡಿ ಬೀದಿ’ ಸಿದ್ಧಗೊಳ್ಳಲಿದೆ.
ಸುಮಾರು ₹ 5 ಕೋಟಿ ವೆಚ್ಚದಲ್ಲಿ ಆಧುನಿಕ ಸೌಲಭ್ಯ ಹಾಗೂ ಆಕರ್ಷಕ ವಿನ್ಯಾಸದೊಂದಿಗೆ ‘ತಿಂಡಿ ಬೀದಿ’ ನಿರ್ಮಾಣವಾಗುತ್ತಿದೆ. ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವಿನ ಸುಮಾರು 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಂ ರಾಯಪುರ ತಿಳಿಸಿದರು.
ಶಾಸಕ ಉದಯ್ ಗರುಡಾಚಾರ್ ಅವರೊಂದಿಗೆ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ಅವರು ಮಾತನಾಡಿದರು.
ತಿಂಡಿಬೀದಿಯಲ್ಲಿ ಎಲ್ಲಾ ವ್ಯಾಪಾರಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಸಮಸ್ಯೆಗಳನ್ನೆಲ್ಲ ಬಗೆಹರಿಸಿಕೊಳ್ಳಲಾಗಿದೆ. ಇನ್ನೊಂದು ತಿಂಗಳಲ್ಲಿ ನವೀಕರಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕ ಉದಯ್ ಬಿ. ಗರುಡಾಚಾರ್ ತಿಳಿಸಿದರು.
ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರುಗಾಲುವೆ ಸಂಪರ್ಕ, ಕೇಬಲ್‌ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ಗೆ ಸಂಬಂಧಿಸಿದ ಕಾಮಗಾರಿ ಮುಕ್ತಾಯಗೊಂಡಿದೆ. ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರೀಟ್ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
ಕ್ಯಾರೇಜ್ ವೇಯಲ್ಲಿ ವರ್ಣರಂಜಿತ ಬಣ್ಣದ ಕಾಂಕ್ರೀಟ್, ಕರ್ಬ್ ಸ್ಟೋನ್‌ಗಳ ಅಳವಡಿಕೆ, ಪಾದಚಾರಿ ಮಾರ್ಗ, ಎಚ್‌ಡಿಡಿ ಕೇಬಲ್‌ಗಳೊಂದಿಗೆ ಬೀದಿ ದೀಪ, ಅಂಗಡಿಗಳಿಗೆ ಕೆನೋಪಿ, ಪ್ರವೇಶ ಪ್ಲಾಜಾದ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಮಾರುಕಟ್ಟೆಗೆ ಭೇಟಿ
ಮಡಿವಾಳ ಮಾರುಕಟ್ಟೆಯಲ್ಲಿ ತ್ಯಾಜ್ಯ ವಿಂಗಡಣೆಯ ಪ್ರಕ್ರಿಯೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಯರಾಂ ರಾಯಪುರ ಸೂಚಿಸಿದರು.
ಮಡಿವಾಳ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಳಿಗೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ಒಣ ತ್ಯಾಜ್ಯವನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡುವ ಉದ್ದೇಶದಿಂದ ಒಣ ತ್ಯಾಜ್ಯ ಸಂಗ್ರಹಣಾ ಘಟಕವನ್ನು ಸ್ಥಾಪಿಸಬೇಕು. ಪಾಲಿಕೆಯ ನಿಯಮಗಳನ್ನು ಪಾಲಿಸದೇ ಇರುವಂತಹವರಿಗೆ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾರುಕಟ್ಟೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ, ಗ್ರಾಹಕರ ಓಡಾಟಕ್ಕೆ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯ ಎಂಜಿನಿಯರ್ ರಾಜೇಶ್, ಕಾರ್ಯಪಾಲಕ ಎಂಜಿನಿಯರ್ ಮಹಂತೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.