ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುವಾಗ ಐಎಸ್‌ಐ ಗುರುತಿನ ಹೆಲ್ಮೆಟ್ ಧರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಸಂಚಾರ ಪೊಲೀಸರು, ನಿಷೇಧಿತ ಅರ್ಧ ಹೆಲ್ಮೆಟ್ ಧರಿಸುವ ತಮ್ಮ ಸಿಬ್ಬಂದಿಗೆ ಪ್ರಾಯೋಗಿಕವಾಗಿ ದಂಡ ವಿಧಿಸುತ್ತಿದ್ದಾರೆ.
ನಗರದಲ್ಲಿ ಸಂಭವಿಸುತ್ತಿರುವ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಜತೆಗೆ, ಬಹುಪಾಲು ಸವಾರರು ಸುರಕ್ಷಿತ ಹೆಲ್ಮೆಟ್ ಧರಿಸದಿರುವುದು ಕಂಡುಬರುತ್ತಿದೆ. ಇದೇ ಕಾರಣಕ್ಕೆ ಐಎಸ್‌ಐ ಗುರುತಿನ ಹೆಲ್ಮೆಟ್ ಕಡ್ಡಾಯ ಮಾಡಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.
‘ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಅರ್ಧ ಹೆಲ್ಮೆಟ್‌ಗಳನ್ನು ಏಕಾಏಕಿ ನಿಷೇಧಿಸಿದರೆ, ಜನರಿಗೆ ತೊಂದರೆ ಆಗುತ್ತದೆ. ಹೀಗಾಗಿ, ಅರ್ಧ ಹೆಲ್ಮೆಟ್ ಧರಿಸದಂತೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಕಾನೂನು ರಕ್ಷಿಸುವ ಪೊಲೀಸರು, ಮೊದಲಿಗೆ ಕಾನೂನು ಪಾಲಿಸಬೇಕು. ಹೀಗಾಗಿ, ಅವರೆಲ್ಲರಿಗೂ ಐಎಸ್‌ಐ ಗುರುತಿನ ಹೆಲ್ಮೆಟ್ ಧರಿಸುವಂತೆ ಸೂಚನೆ ನೀಡಲಾಗಿದೆ. ಅರ್ಧ ಹೆಲ್ಮೆಟ್ ಅಥವಾ ಐಎಸ್‌ಐ ಗುರುತು ಇಲ್ಲದ ಹೆಲ್ಮೆಟ್ ಧರಿಸಿ ಸಿಕ್ಕಿಬೀಳುವ ಪೊಲೀಸರಿಗೆ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಿದೆ’ ಎಂದು ತಿಳಿಸಿದರು.
‘ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರಿಗೆ ದಂಡ ವಿಧಿಸಲಾಗಿದೆ. ಇದು ಪ್ರಾಯೋಗಿಕ ಮಾತ್ರ. ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೂ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ, ಜನರು ಎಚ್ಚೆತ್ತುಕೊಂಡು ಐಎಸ್‌ಐ ಗುರುತಿನ ಹೆಲ್ಮೆಟ್ ಧರಿಸಬೇಕು’ ಎಂದು ಅಧಿಕಾರಿ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.