ADVERTISEMENT

ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕ ಹೆಚ್ಚಳ: ಸವದಿ

2800 ನಿರ್ವಾಹಕ, ಚಾಲಕರ ನೇಮಕ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 19:50 IST
Last Updated 12 ಫೆಬ್ರುವರಿ 2020, 19:50 IST
   

ಬೆಂಗಳೂರು: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕವನ್ನು ಹೆಚ್ಚಿಸಲಾಗುವುದು ಎಂದು ಸಾರಿಗೆ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ಹೇಳಿದರು.

ಕೇಂದ್ರ ಸರ್ಕಾರ ದಂಡ ಶುಲ್ಕ ಪರಿಷ್ಕರಿಸಿತ್ತು. ಆದರೆ, ಜನರಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಕಡಿಮೆ ಮಾಡಲಾ
ಗಿತ್ತು. ಬಜೆಟ್ ಮಂಡನೆ ನಂತರ ಕೇಂದ್ರ ರೂಪಿಸಿರುವ ನಿಯಮದ ಪ್ರಕಾರವೇ ದಂಡ ವಿಧಿಸಲಾಗುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದುಬಾರಿ ದಂಡ ಶುಲ್ಕದ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿದ್ದು, ಸಂಚಾರ ನಿಯಮ ಉಲ್ಲಂಘಿಸುವುದೂ ಕಡಿಮೆಯಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸುವ ಪ್ರಕರಣಗಳೂ ತಗ್ಗಿವೆ ಎಂದು ಹೇಳಿದರು.

ADVERTISEMENT

ಈ ವರ್ಷ ಸಾರಿಗೆ ಇಲಾಖೆ ತೆರಿಗೆ ಸಂಗ್ರಹದಲ್ಲಿ ₹1,200 ಕೋಟಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಚಿಂತನೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ಚಿಂತಿಸಲಾಗಿದೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಕಳೆದ ಐದು ವರ್ಷಗಳಿಂದ ದರ ಏರಿಕೆ ಮಾಡಿಲ್ಲ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದು, ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ. ಈ ವಿಚಾರ ಎಲ್ಲರಿಗೂ ಗೊತ್ತಾಗಬೇಕಿದೆ. ವಿರೋಧ ಪಕ್ಷಗಳಿಗೂ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗುವುದು. ಅಗತ್ಯವಿದ್ದರೆ ಈ ಬಗ್ಗೆ ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲೇ ಚರ್ಚಿಸಲಿ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.