ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ನಗರ ಸಂಚಾರ ವಿಭಾಗದ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು, ಬುಧವಾರ ಒಂದೇ ದಿನ 1,980 ಪ್ರಕರಣ ದಾಖಲಿಸಿದ್ದಾರೆ.
ಬುಧವಾರ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ₹9.96 ಲಕ್ಷ ದಂಡ ಸಂಗ್ರಹಿಸಲಾಗಿದೆ.
ನಿರ್ಬಂಧಿತ ರಸ್ತೆಯಲ್ಲಿ ಸಂಚರಿಸಿದ ವಾಹನ ಸವಾರರ ವಿರುದ್ಧ 471 ಪ್ರಕರಣ ದಾಖಲಿಸಿಕೊಂಡು, ₹2.39 ಲಕ್ಷ ದಂಡ ಸಂಗ್ರಹಿಸಲಾಗಿದೆ. ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡಿದ್ದ 352 ಮಂದಿಯಿಂದ ₹1.77 ಲಕ್ಷ ದಂಡ ಸಂಗ್ರಹಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಮೂವರು ಕುಳಿತು ಸವಾರಿ ಮಾಡಿದ್ದ 60 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ₹30 ಸಾವಿರ ದಂಡ ಸಂಗ್ರಹಿಸಲಾಗಿದೆ.
ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದವರ ವಿರುದ್ಧ 178 ಪ್ರಕರಣ ದಾಖಲಿಸಿಕೊಂಡು, ₹90 ಸಾವಿರ ದಂಡ ಸಂಗ್ರಹಿಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಹಾಗೂ ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ದ ಒಟ್ಟು 919 ಪ್ರಕರಣ ದಾಖಲಿಸಿಕೊಂಡು, ಒಟ್ಟು ₹4.50 ಲಕ್ಷ ದಂಡ ಸಂಗ್ರಹ ಮಾಡಲಾಗಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
‘ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ಮುಂದುವರೆಸಲಾಗುವುದು’ ಎಂದೂ ಅವರು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.