ADVERTISEMENT

ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಅಕ್ರಮ: ಎಇಇ ಬಂಧನ

ತನಿಖೆ ಚುರುಕುಗೊಳಿಸಿದ ಸಿಐಡಿ ಪೊಲೀಸರು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 23:30 IST
Last Updated 5 ಅಕ್ಟೋಬರ್ 2024, 23:30 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದ್ದ ₹47.10 ಕೋಟಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ADVERTISEMENT

ಪಂಚಾಯತ್‌ರಾಜ್‌ ಇಲಾಖೆಯ ಮಾಗಡಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚರಣ್‌ಕುಮಾರ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

‘ಶುಕ್ರವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಶನಿವಾರ ಕೋರ್ಟ್‌ಗೆ ಹಾಜರು ಪಡಿಸಲಾಯಿತು. ಕೋರ್ಟ್‌ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ’ ಎಂದು ಮೂಲಗಳು ತಿಳಿಸಿವೆ.

‘ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚರಣ್‌ಕುಮಾರ್ ಅವರನ್ನು ನಿಯೋಜನೆ ಮೇರೆಗೆ ಡಿಡಿಯುಟಿಟಿಎಲ್‌ಗೆ ವರ್ಗಾವಣೆ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ, 300ಕ್ಕೂ ಕಾಮಗಾರಿಗಳು ಪೂರ್ಣಗೊಂಡಿರುವುದಾಗಿ ಚರಣ್‌ಕುಮಾರ್‌ ದೃಢೀಕರಿಸಿದ್ದರು’ ಎಂದು ಸಿಐಡಿ ಪೊಲೀಸರು ತಿಳಿಸಿದರು.

‘ಹಿರಿಯ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಒತ್ತಡಕ್ಕೆ ಒಳಗಾಗಿ ದೃಢೀಕರಣ ಪತ್ರ ನೀಡಿದ್ದೆ ಎಂಬುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಟರ್ಮಿನಲ್‌ನ ಮಾಜಿ ಅಧ್ಯಕ್ಷ, ವಿಧಾನ ಪರಿಷತ್‌ ಬಿಜೆಪಿಯ ಮಾಜಿ ಸದಸ್ಯ ಡಿ.ಎಸ್‌.ವೀರಯ್ಯ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಶಂಕರಪ್ಪ ಹಾಗೂ ಅವರ ಸಹೋದರ, ರಾಮನಗರ ಜಿಲ್ಲೆ ಮಾಯಾಗನಹಳ್ಳಿಯ ನಿವಾಸಿ ಎಂ.ಎಸ್‌.ಹೊನ್ನಪ್ಪ ಅವರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೂವರು ಗುತ್ತಿಗೆದಾರರು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ತನಿಖೆ ಮುಂದುವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.