ಬೆಂಗಳೂರು: ನಗರದ ವಯ್ಯಾಲಿಕಾವಲ್‌ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ನೂತನ ವರ್ಷ ಆರಂಭದ ದಿನವಾದ ಜನವರಿ 1ರಂದು ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಬೆಳಿಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಜ.6ರಂದು ವೈಕುಂಠ ಏಕಾದಶಿ ಅಂಗವಾಗಿ ಬೆಳಿಗ್ಗೆ 5ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಟಿಟಿಡಿ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷ ಡಿ. ಕುಪೇಂದ್ರ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜನವರಿ 1ರಂದು ಸುಮಾರು 15 ಸಾವಿರ ಹಾಗೂ ವೈಕುಂಠ ಏಕಾದಶಿಯಂದು 60 ಸಾವಿರಕ್ಕೂ ಹೆಚ್ಚು ಭಕ್ತರು ಸ್ವಾಮಿಯ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಇದಕ್ಕೆ ಪೂರಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ತಿರುಪತಿಯ ದರ್ಶನದ ಮಾದರಿಯಲ್ಲಿ ಇಲ್ಲೂ ವ್ಯವಸ್ಥೆ ಮಾಡಲಾಗಿದೆ. ವೃದ್ಧರು, ಅಂಗವಿಕಲರು ಮತ್ತು ಗರ್ಭಿಣಿಯರಿಗೆ ವಿಶೇಷ ಪಾಸ್‌ಗಳನ್ನು ನೀಡಲಾಗುವುದು. ಇವರಿಗೆ ನೇರ ದರ್ಶನದ ವ್ಯವಸ್ಥೆ ಇರುತ್ತದೆ ಎಂದು ಕುಪೇಂದ್ರ ರೆಡ್ಡಿ ತಿಳಿಸಿದರು.
ಚೌಡಯ್ಯ ಸ್ಮಾರಕ ಭವನ ಮತ್ತು ವಯ್ಯಾಲಿಕಾವಲ್ ಎಜುಕೇಷನ್ ಸೊಸೈಟಿ ಆವರಣದಲ್ಲಿವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಎರಡು ದಿನವೂ ತಿರುಪತಿಯಿಂದ ತರಿಸಲಾದ ಲಡ್ಡುಗಳನ್ನು ವಿತರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.