ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರು ಹೇಳುವಂತೆ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಬಿ. ಕಲ್ಲೇಶಪ್ಪ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಒತ್ತಡ ಹೇರುತ್ತಿರುವ ಆರೋಪದಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧವೇ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿ, ಜಾರ್ಖಂಡ್ ಮಾದರಿಯಲ್ಲಿ ಮುಖ್ಯಮಂತ್ರಿಯವರನ್ನು ಪ್ರಕರಣದಲ್ಲಿ ಸಿಲುಕಿಸಲು ಇ.ಡಿ ಯತ್ನಿಸುತ್ತಿದೆ ಎಂದು ವಿಧಾನಮಂಡಲದ ಒಳಗೆ, ಹೊರಗೆ ಸಚಿವರು, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಆರೋಪಿಸಿದ್ದರು. ಈಗ ಇ.ಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದರಿಂದ ರಾಜ್ಯ ಸರ್ಕಾರವು ತನಿಖಾ ಸಂಸ್ಥೆ ಜೊತೆ ನೇರ ಸಂಘರ್ಷಕ್ಕೆ ಇಳಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.