ADVERTISEMENT

ವಾಲ್ಮೀಕಿ ನಿಗಮ: ಮತ್ತೊಬ್ಬ ಆರೋಪಿ ಬಂಧನ

ಬಂಧಿತ ಸಂಖ್ಯೆ 11ಕ್ಕೆ ಏರಿಕೆ, ಒಟ್ಟು ₹14.7 ಕೋಟಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 15:44 IST
Last Updated 24 ಜೂನ್ 2024, 15:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ಮತ್ತೊಬ್ಬ ಆರೋಪಿ ಸಾಯಿತೇಜ್‌ ಎಂಬುವರನ್ನು ವಿಶೇಷ ತನಿಖಾ ದಳದ(ಎಸ್‌ಐಟಿ) ಪೊಲೀಸರು ಹೈದರಾಬಾದ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ.

‘ಬಂಧಿತ ಆರೋಪಿಯಿಂದ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆ ಪತ್ರಗಳನ್ನು ಜಪ್ತಿ ಮಾಡಲಾಗಿದೆ. ಸಾಯಿತೇಜ್‌,  ಬಂಧಿತ ಆರೋಪಿ ಸತ್ಯನಾರಾಯಣ ವರ್ಮ ಅವರ ಸಹಚರ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ADVERTISEMENT

‘ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ–ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪದಡಿ ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಎಂಬುವರನ್ನು ಈ ಹಿಂದೆ ಬಂಧಿಸಲಾಗಿತ್ತು. ಹಣ ವರ್ಗಾವಣೆ ಪ್ರಕರಣದಲ್ಲಿ ವರ್ಮಾ ಅವರೊಂದಿಗೆ ಸಾಯಿತೇಜ್‌ ಭಾಗಿ ಆಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.

ಹೈದರಾಬಾದ್‌ನ ‘ಫಸ್ಟ್‌ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ’ಯ (ಎಫ್‌ಎಫ್‌ಸಿಸಿಎಸ್‌ಎಲ್‌) 18 ಖಾತೆಗಳಿಗೆ ವಾಲ್ಮೀಕಿ ನಿಗಮದ ಖಾತೆಯಿಂದ ₹94.73 ಕೋಟಿ ಹಣ ವರ್ಗಾವಣೆ ಆಗಿತ್ತು. ಈ ಸಂಬಂಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ಬಳಿಕ ಸೊಸೈಟಿಯ ಅಧ್ಯಕ್ಷ ಸತ್ಯನಾರಾಯಣ್‌ ಅವರನ್ನು ಎಸ್‌ಐಟಿ ಬಂಧಿಸಿತ್ತು.

‘ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು ಆರೋಪಿಗಳಿಂದ ಒಟ್ಟು ₹14.7 ಕೋಟಿ ಜಪ್ತಿ ಮಾಡಲಾಗಿದೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.