ADVERTISEMENT

ತಮಿಳುನಾಡಿಗೆ ಕಾವೇರಿ ನೀರು: ಕನ್ನಡ ಒಕ್ಕೂಟದಿಂದ ಪ್ರತಿಭಟನೆ

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2023, 15:37 IST
Last Updated 24 ಸೆಪ್ಟೆಂಬರ್ 2023, 15:37 IST
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. – ಪ್ರಜಾವಾಣಿ ಚಿತ್ರ 
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತಿತರರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. – ಪ್ರಜಾವಾಣಿ ಚಿತ್ರ    

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ, ಕನ್ನಡ ಒಕ್ಕೂಟದ ಕಾರ್ಯಕರ್ತರು  ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಭಾನುವಾರ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕಾವೇರಿಕೊಳ್ಳದ ಜಿಲ್ಲೆಗಳಲ್ಲಿ ನೀರು ಸಿಗದೆ ಬೆಳೆಗಳು ಒಣಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಬೇಸಿಗೆಯಲ್ಲಿ ಬೆಂಗಳೂರು ನಗರದ ಜನರಿಗೂ ಕುಡಿಯುವ ನೀರು ಸಿಗುವುದು ಕಷ್ಟವಿದೆ. ರಾಜ್ಯ ಸರ್ಕಾರವು ನಾಡಿನ ಜನರಿಗೆ ದ್ರೋಹ ಎಸಗುತ್ತಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರುತ್ತೇವೆಂದು ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌, ಈಗ ಮೋಸ ಮಾಡುತ್ತಿದೆ. ಪ್ರತಿನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಹರಿಸಿದರೆ ಕೆಆರ್‌ಎಸ್‌ ಜಲಾಶಯ ಬರಿದಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮಾತನಾಡಿ, ‘ರಾಜ್ಯದ ಸಂಸದರು ಕಾವೇರಿ ವಿಚಾರವಾಗಿ ಸಂಸತ್‌ನಲ್ಲಿ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಎಲ್ಲರೂ ಮೌನ ವಹಿಸಿದ್ದಾರೆ. ಎಲ್ಲ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರವು ತುರ್ತು ಅಧಿವೇಶನ ಕರೆದು ತಮಿಳುನಾಡಿಗೆ ಒಂದು ಹನಿಯನ್ನೂ ನೀರು ಬಿಡುವುದಿಲ್ಲ ಎಂಬ ತೀರ್ಮಾನ ಕೈಗೊಳ್ಳಬೇಕು. ಇದು ಮಾದರಿ ನಡೆ ಎನಿಸಲಿದೆ’ ಎಂದು ಹೇಳಿದರು.

ರಸ್ತೆತಡೆ ನಡೆಸಲು ಮುಂದಾದ ವೇಳೆ ವಾಟಾಳ್‌ ನಾಗರಾಜ್‌ ಸೇರಿದಂತೆ ಒಕ್ಕೂಟದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಬಂದೋಬಸ್ತ್‌:‌ ರಾಜಧಾನಿಯಲ್ಲೂ ಕಾವೇರಿ ಹೋರಾಟವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್‌ ಕಲ್ಪಿಸಲಾಗಿದೆ.

‘ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ಇಡುವಂತೆ ಎಲ್ಲ ಡಿಸಿಪಿಗಳಿಗೆ ನಗರ ಪೊಲೀಸ್‌ ಕಮಿಷನರ್‌ ಸೂಚಿಸಿದ್ದಾರೆ. ಅತ್ತಿಬೆಲೆ, ಕೆ.ಆರ್‌ ಮಾರುಕಟ್ಟೆ ಪ್ರದೇಶ, ಮೆಜೆಸ್ಟಿಕ್‌ ಸುತ್ತಮುತ್ತ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.