ಬೆಂಗಳೂರು: ಗೌರವಧನ ಹೆಚ್ಚಳ, ಗ್ರ್ಯಾಚುಟಿ ಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯು ಇದೇ 19ರಂದು ಬೆಳಿಗ್ಗೆ 11 ಗಂಟೆಗೆ ‘ವಿಧಾನಸೌಧ ಚಲೋ’ ಶೀರ್ಷಿಕೆಯಡಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ‘ಮಹಿಳೆಯರು, ಮಕ್ಕಳ ಆರೋಗ್ಯ ವೃದ್ಧಿಗೆ ಸಹಕಾರಿಯಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ರಾಜ್ಯದಲ್ಲಿ ತಲಾ 70 ಸಾವಿರ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅಂಗನವಾಡಿಗಳ ಸಬಲೀಕರಣಕ್ಕೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರಾಮಾಣಿಕ ಬೇಡಿಕೆಗಳನ್ನು ಈಡೇರಿಸಬೇಕು. ಗ್ರ್ಯಾಚುಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈ ಹಿಂದೆ ಹೊರಡಿಸಿರುವ ಆದೇಶವನ್ನು ತಿದ್ದುಪಡಿ ಮಾಡಿ, ನಿವೃತ್ತರಾದ ಎಲ್ಲರಿಗೂ ಗ್ರ್ಯಾಚುಟಿ ಸೌಲಭ್ಯ ಒದಗಿಸಬೇಕು’ ಎಂದರು.
‘ಬೆಲೆ ಏರಿಕೆಯ ಈ ಕಾಲಘಟ್ಟದಲ್ಲಿ ಈಗ ನೀಡುತ್ತಿರುವ ಗೌರವಧನದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹ 15 ಸಾವಿರಕ್ಕೆ, ಸಹಾಯಕಿಯರ ಗೌರವಧನ ₹ 10 ಸಾವಿರಕ್ಕೆ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಸರಬರಾಜು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.