ಬೆಂಗಳೂರು: ನೀರಿನ ಸಂರಕ್ಷಣೆ ವಿಷಯವಾಗಿ ಜಲಮಂಡಳಿ ಸಿಬ್ಬಂದಿಯ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಬುಧವಾರ ಆಯೋಜಿಸಲಾಗಿತ್ತು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕ್ಷೇಮಾಭಿವೃದ್ಧಿ ನೌಕರರ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಪ್ರಯುಕ್ತ ಸರ್ ಎಂ. ವಿಶ್ವೇಶ್ವರಯ್ಯ ಮಳೆ ನೀರು ಸುಗ್ಗಿ ಕೇಂದ್ರದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಮಳೆ ನೀರು ಸುಗ್ಗಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಕ್ಕಳಿಗೆ ನೀರಿನ ಸಂರಕ್ಷಣೆ, ಮಳೆ ನೀರು ಸಂಗ್ರಹದ ಬಗ್ಗೆ ಮಾಹಿತಿ ನೀಡಲಾಯಿತು. ಕಿರುಚಿತ್ರ, ಮಾದರಿಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಲಾಯಿತು.
‘ದೇಶದಲ್ಲಿ ಮೊದಲ ‘ಮಳೆ ನೀರು ಸುಗ್ಗಿ ಕೇಂದ್ರ’ವನ್ನು ನಿರ್ಮಿಸಿದ ಕೀರ್ತಿ ಬೆಂಗಳೂರು ಜಲಮಂಡಳಿಯದ್ದು’ ಎಂದು ಜಲಮಂಡಳಿಯ ನಿವೃತ್ತ ಪಿಆರ್‌ಒ ಬಿ. ಎಂ. ಮಂಜುನಾಥ್ ಹೇಳಿದರು.
ಚಿತ್ರಕಲೆ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ನೌಕರರ ಮಕ್ಕಳು ಪಾಲ್ಗೊಂಡಿದ್ದರು. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ನೌಕರರ ಸಂಘದ ಅಧ್ಯಕ್ಷ ಸದಾಶಿವ ಕಾಂಬಳೆ, ಹೆಚ್ಚುವರಿ ಮುಖ್ಯ ಎಂಜಿನಿಯರ್ ಕೆ.ಲಕ್ಷ್ಮೀಕಾಂತ್ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.