ಬೆಂಗಳೂರು: ಮೋಡ ಕವಿದ ವಾತಾವರಣ, ಬಿಸಿಲಿನಿಂದಾಗಿ ನಗರದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮಳೆಯ ಅಭಾವದಿಂದಾಗಿ ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿತ್ತು. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದರೆ, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಜುಲೈ ಬಳಿಕ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ತಾಪಮಾನ ಇಳಿಮುಖ ಕಂಡು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಇಳಿಕೆಯಾಗಿದ್ದ ತಾಪಮಾನ ಈಗ ಮತ್ತೆ ಏರುಮುಖ ಮಾಡಿದೆ.
ಹವಾಮಾನ ಇಲಾಖೆ ಪ್ರಕಾರ, ಕಳೆದ ಒಂದು ವಾರದಿಂದ ಗರಿಷ್ಠ ಉಷ್ಣಾಂಶ ಸರಾಸರಿ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ನಗರದಲ್ಲಿ ಮುಂದಿನ ನಾಲ್ಕು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31ರಿಂದ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22ರಿಂದ 23 ಡಿಗ್ರಿ ಸೆಲ್ಸಿಯಸ್ ಇರುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.