ಬೆಂಗಳೂರು: ‘ನಗರದಲ್ಲಿ ರಸ್ತೆಗಳು ಪದೇಪದೇ ಕಿತ್ತು ಬರುತ್ತಿರುವುದರಿಂದ ಗುಂಡಿಮುಕ್ತ ಶಾಶ್ವತ ರಸ್ತೆಗಳನ್ನು ನಿರ್ಮಿಸಲು ಒಟ್ಟು ₹1,800 ಕೋಟಿ ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಲಾಗುತ್ತಿದೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
‘ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು’ ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರ, ಮಹಾಲಕ್ಷ್ಮೀಪುರ ವಿಧಾನಸಭೆ ಕ್ಷೇತ್ರಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ರಸ್ತೆಗಳಲ್ಲಿ ಗುಂಡಿಗಳು ಬೀಳಬಾರದು ಎಂಬ ಉದ್ದೇಶದಿಂದ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲಾಗುತ್ತಿದೆ. ಇವು ಸುಮಾರು 25 ವರ್ಷ ಬಾಳಿಕೆ ಬರುತ್ತವೆ. ನಿತ್ಯ ಮೂರ್ನಾಲ್ಕು ವಾರ್ಡ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.
‘ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು 200 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ. ಉನ್ನತ ಗುಣಮಟ್ಟಕ್ಕಾಗಿ ಆ ರಸ್ತೆಗಳನ್ನೂ ವೈಟ್ ಟಾಪಿಂಗ್ ಮಾಡಲು ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಶಾಸಕರಾದ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಕೆ. ಗೋಪಾಲಯ್ಯ, ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಲಯ ಜಂಟಿ ಆಯುಕ್ತೆ ಪಲ್ಲವಿ ಉಪಸ್ಥಿತರಿದ್ದರು.
ಎರಡೂ ಬದಿ ಪಾದಚಾರಿ ಮಾರ್ಗ ಕೇಬಲ್‌ಗಳಿಗಾಗಿ ಡಕ್ಟ್ ನಿರ್ಮಾಣ
ನೂತನ ವಿನ್ಯಾಸದ ವಿದ್ಯುತ್ ದೀಪ ಅಳವಡಿಕೆ
ರಸ್ತೆಗಳ ಎರಡೂ ಬದಿ ಮಳೆ ನೀರಿನ ಚರಂಡಿಗಾಗಿ ಕೊಳವೆ ಮಾರ್ಗ ಅಳವಡಿಕೆ
ರಸ್ತೆಗಳ ಎರಡೂ ಬದಿ ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.