ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರವಾಗಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಅ. 26ರವರೆಗೂ ಮಳೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮಳೆ ಜೋರಾಗುವ ಸಂಭವವಿದೆ ಎಂದು ತಿಳಿಸಿದೆ.
ಮಳೆ ಪ್ರಮಾಣ:
ಉತ್ತರ ಕನ್ನಡದ ಕದ್ರಾದಲ್ಲಿ 11 ಸೆಂ.ಮೀ., ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ 10 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 9 ಸೆಂ.ಮೀ., ಉತ್ತರ ಕನ್ನಡದ ಮುಂಡಗೋಡು, ಹಾವೇರಿಯ ಹಿರೇಕೆರೂರು, ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ಶಿವಮೊಗ್ಗ, ಆನವಟ್ಟಿಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.