ಬೆಂಗಳೂರು: ‘ನಗರದ ಹಲವು ಪ್ರದೇಶಗಳಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ.) ಕಟ್ಟಡದಲ್ಲಿ ವಾಸವಿರುವ ಯುವತಿಯರನ್ನು ಕಿಡಿಗೇಡಿಗಳು ಚುಡಾಯಿಸುತ್ತಿದ್ದಾರೆ. ಯುವತಿಯರು ರಸ್ತೆಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ’ ಎಂದು ಸಾರ್ವಜನಿಕರು ದೂರಿದರು.
ಬೆಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರ ಸಾಗರ್ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.
‘ಯುವತಿಯರನ್ನು ಚುಡಾಯಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪಿ.ಜಿ. ಕಟ್ಟಡಗಳು ಇರುವ ಪ್ರದೇಶಗಳಲ್ಲಿ ಪೊಲೀಸರ ಗಸ್ತು ಹೆಚ್ಚಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದರು.
ದೂರು ಆಲಿಸಿದ ಕಮಿಷನರ್ ಬಿ. ದಯಾನಂದ್, ‘ನಗರದ ಬಹುತೇಕ ಕಡೆ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಿಡಿಗೇಡಿಗಳ ಕೃತ್ಯಗಳು ಕಂಡುಬಂದ ಕೂಡಲೇ ಕ್ರಮ ಜರುಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪೇಯಿಂಗ್ ಗೆಸ್ಟ್ ಕಟ್ಟಡಗಳು ಇರುವ ಪ್ರದೇಶಗಳಲ್ಲಿ ಪೊಲೀಸರ ಗಸ್ತು ಹೆಚ್ಚಿಸಲಾಗುವುದು’ ಎಂದರು.
ಸಾರ್ವಜನಿಕರೊಬ್ಬರು, ‘ವಸಂತನಗರ ಹಾಗೂ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಬೀದಿದೀಪಗಳು ಇಲ್ಲ. ರಾತ್ರಿ ಹೊತ್ತು ರಸ್ತೆಗಳಲ್ಲಿ ಕತ್ತಲು ಆವರಿಸುತ್ತಿದೆ. ಇಂಥ ರಸ್ತೆಗಳಲ್ಲಿ ನಡೆದುಕೊಂಡು ಹೋಗಲು ಭಯವಾಗುತ್ತಿದೆ. ಬೀದಿದೀಪಗಳನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಕೋರಿದರು.
‘ಪ್ರಮುಖ ರಸ್ತೆ ಹಾಗೂ ಒಳ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಪಾದಚಾರಿಗಳ ಓಡಾಟ ಹಾಗೂ ಇತರೆ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ದಟ್ಟಣೆಯೂ ಹೆಚ್ಚಾಗುತ್ತಿದೆ’ ಎಂದು ದೂರಿದರು.
ಕಮಿಷನರ್ ದಯಾನಂದ್, ‘ಬೀದಿದೀಪ ಅಳವಡಿಕೆ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲೀಸರಿಗೆ ಸೂಚಿಸುತ್ತೇನೆ’ ಎಂದರು.
ಕೇಂದ್ರ ವಿಭಾಗದ ಡಿಸಿಪಿ ಎಚ್. ಶೇಖರ್, ಸಂಚಾರ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.