ADVERTISEMENT

ಔರಾದ್: 13 ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 15:32 IST
Last Updated 19 ಮಾರ್ಚ್ 2024, 15:32 IST
ಔರಾದ್ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು
ಔರಾದ್ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ನಡೆದ ಸಭೆಯಲ್ಲಿ ತಹಶೀಲ್ದಾರ್ ನಾಗಯ್ಯ ಹಿರೇಮಠ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು   

ಔರಾದ್: ಮಾರ್ಚ್ 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಕುರಿತು ಮಂಗಳವಾರ ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪರೀಕ್ಷಾ ಮುಖ್ಯ ಅಧೀಕ್ಷಕರ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

‘ಪರೀಕ್ಷೆ ತಾಲ್ಲೂಕಿನಾದ್ಯಂತ ಭಯ, ನಕಲು ಮುಕ್ತವಾಗಿ ನಡೆಯಬೇಕು. ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಬಗ್ಗೆ ಭಯ ಇರದಂತೆ ನೋಡಿಕೊಳ್ಳಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ’ ಸೂಚಿಸಿದರು.

‘ಈ ಬಾರಿ ಕಮಲನಗರ ಹಾಗೂ ಔರಾದ್ ತಾಲ್ಲೂಕು ಸೇರಿ 3,598 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 13 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಕಮಲನಗರದ ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ, ಔರಾದ್ ಅಮರೇಶ್ವರ ಕಾಲೇಜು ಹಾಗೂ ಔರಾದ್ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರ ಎಂದು ಗುರುತಿಸಲಾಗಿದೆ. ಠಾಣಾಕುಶನೂರ ಪಬ್ಲಿಕ್ ಶಾಲೆ ಅತಿ ಸೂಕ್ಷ್ಮ ಎಂದು ಗುರುತಿಸಿ ಈ ಕೇಂದ್ರಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ತಿಳಿಸಿದರು.

ADVERTISEMENT

‘ಈ ಬಾರಿ ಪೂರಕ ಪರೀಕ್ಷೆ ಬದಲು ಮೂರು ಹಂತಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದರಿಂದ ಮೊದಲ ಬಾರಿ ನಿರೀಕ್ಷಿತ ಅಂಕಗಳು ಲಭಿಸದಿದ್ದಲ್ಲಿ ಮತ್ತೊಂದು ಅವಕಾಶದಲ್ಲಿ ಫಲಿತಾಂಶ ಸುಧಾರಿಸಿಕೊಳ್ಳಬಹುದಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭಯವಾಗಿ ಪರೀಕ್ಷೆ ಬರೆಯುವಂತೆ’ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ, ‘ಶಿಕ್ಷಕರು ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿ ತಮಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿಭಾಯಿಸಿ ಪರೀಕ್ಷೆ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 155 ಕೊಠಡಿ ಸಿದ್ಧ ಮಾಡಿಕೊಳ್ಳಲಾಗಿದೆ. 200 ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ನೋಡಲ್ ಅಧಿಕಾ ಈಶ್ವರ ಕ್ಯಾದೆ ತಿಳಿಸಿದರು.

ಪ್ರಾಢಶಾಲೆ ಮುಖ್ಯಶಿಕ್ಷಕರು ಹಾಗೂ ಪರೀಕ್ಷೆ ಮುಖ್ಯಅಧೀಕ್ಷಕರು ಸಭೆಯಲ್ಲಿ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.