ADVERTISEMENT

ಬೀದರ್‌ | '35 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ'

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 6:33 IST
Last Updated 11 ಜನವರಿ 2024, 6:33 IST
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ಅಧ್ಯಕ್ಷತೆಯಲ್ಲಿ ಬೀದರ್‌ನಲ್ಲಿ ಬುಧವಾರ ಪದವಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಮಾಲೋಚನಾ ಸಭೆ ನಡೆಯಿತು
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ಅಧ್ಯಕ್ಷತೆಯಲ್ಲಿ ಬೀದರ್‌ನಲ್ಲಿ ಬುಧವಾರ ಪದವಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಮಾಲೋಚನಾ ಸಭೆ ನಡೆಯಿತು   

ಬೀದರ್‌: ‘ರಾಜ್ಯದಲ್ಲಿ ಖಾಲಿ ಇರುವ 35 ಸಾವಿರ ಶಿಕ್ಷಕರ ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಒಪ್ಪಿಗೆ ಕೂಡ ಸೂಚಿಸಿದ್ದಾರೆ’ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ತಿಳಿಸಿದರು.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೀದರ್‌ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಬೀದರ್‌ ಜಿಲ್ಲಾ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಏರ್ಪಡಿಸಿದ್ದ ‘ಶಿಕ್ಷಣದ ಉನ್ನತೀಕರಣ’ ಕುರಿತ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. 

ಈಗಿರುವ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಹತ್ತು ಜನರ ಕೆಲಸ ಒಬ್ಬರೇ ಮಾಡಬೇಕಾಗಿದೆ. ರಾಜ್ಯದಲ್ಲಿ 35 ಸಾವಿರ ಶಿಕ್ಷಕರ ಕೊರತೆಯಿದೆ. 3,200 ಬ್ಯಾಕ್‍ಲಾಗ್ ಹುದ್ದೆಗಳ ಭರ್ತಿ ಮಾಡುವ ಅವಶ್ಯಕತೆ ಇದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ADVERTISEMENT

ಒಂದು ವಿಶ್ವವಿದ್ಯಾಲಯದ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕಾದರೆ ಶಿಕ್ಷಕರ ಸಂಖ್ಯೆ ಅತ್ಯಗತ್ಯವಾಗಿದೆ. ಇಲ್ಲದಿದ್ದರೆ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಬೀದರ್‌ ವಿಶ್ವವಿದ್ಯಾಲಯ ಸ್ಥಾಪನೆಯಾದ ಮಾತ್ರಕ್ಕೆ ಎಲ್ಲವೂ ಮುಗಿದಿಲ್ಲ. ಅದರ ಮುಂದೆ ದೊಡ್ಡ ಸವಾಲುಗಳಿವೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ, ವಿವಿಧ ಪಾಠೋಪಕರಣಗಳು ಮತ್ತು ಪೀಠೋಪಕರಣಗಳ ಅವಶ್ಯಕತೆ, ವಿದ್ಯಾರ್ಥಿಗಳ ಅಧ್ಯಯನಕ್ಕೆ ಪುಸ್ತಕಗಳ ಪ್ರಕಟಣೆ, ತರ್ಜುಮೆಗೊಳಿಸುವ ಕಾರ್ಯ ನಡೆಯಬೇಕು ಎಂದರು.

ಬೀದರ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಮಾತನಾಡಿ, ಮಕ್ಕಳ ಶಿಕ್ಷಣದ ಮಟ್ಟ ಸುಧಾರಣೆಗೆ ಬೀದರ್‌ ವಿಶ್ವವಿದ್ಯಾಲಯ ಎಲ್ಲ ರೀತಿಯ ಸರ್ವ ಪ್ರಯತ್ನ ಮಾಡುತ್ತಿದೆ. ಆದರೆ, ವಿವಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಆದಷ್ಟು ಬೇಗ ಕಲ್ಪಿಸಬೇಕೆಂದು ಮನವಿ ಮಾಡಿದರು.

ಕುಲಸಚಿವ ಪ್ರೊ. ಪರಮೇಶ್ವರ ನಾಯಕ, ಡೀನ್‌ಗಳಾದ ಜಗನ್ನಾಥ ಹೆಬ್ಬಾಳೆ, ಪ್ರೊ. ದೇವಿದಾಸ ತುಮಕುಂಟೆ, ಪ್ರೊ. ರವೀಂದ್ರಕುಮಾರ ಗಬಾಡೆ, ಪ್ರೊ. ಶರಣಪ್ಪ, ಪ್ರೊ. ಮಲ್ಲಿಕಾರ್ಜುನ ಕನಕಟ್ಟೆ, ವಿಶ್ರಾಂತ ಕುಲಪತಿ ಪ್ರೊ. ಬಿ.ಜಿಮೂಲಿಮನಿ, ಶರಣ ಬಸವೇಶ್ವರ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಕಲ್ಯಾಣರಾವ ಪಾಟೀಲ, ಶಾಂತಕುಮಾರ ಪಾಟೀಲ,  ಸಾವಿತ್ರಿಬಾಯಿ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.