ಬೀದರ್: ‘ಕುಷ್ಠ ರೋಗದ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯ ಹಾಗೂ ಔಷಧಗಳ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರತಿಯೊಂದು ಗ್ರಾಮ ಹಾಗೂ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಹೇಳಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ವಿಶ್ವ ಕುಷ್ಠರೋಗ ನಿರ್ಮೂಲನಾ ದಿನಾಚರಣೆ ಅಂಗವಾಗಿ ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ‘ಕುಷ್ಠ ರೋಗ ಮುಕ್ತ ಭಾರತದ ನಡೆ’ ಘೋಷ ವಾಕ್ಯದೊಂದಿಗೆ ಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿರುವ ಕಾರಣ ರೋಗದ ಬಗ್ಗೆ ಜನರು ಹೆಚ್ಚು ತಿಳಿದುಕೊಳ್ಳಲು ಸಾಧ್ಯವಾಗಿದೆ’ ಎಂದು ಹೇಳಿದರು.
‘ಕುಷ್ಠ ರೋಗ ಶಾಪವಲ್ಲ. ಮೊದಲು ಜನರಲ್ಲಿ ತಿಳಿವಳಿಕೆ ಕೊರತೆಯಿಂದಾಗಿ ಭಯಪಡುತ್ತಿದ್ದರು. ಆದರೆ, ಈ ರೋಗವನ್ನು ಗುಣಪಡಿಸಲು ಸಾಧ್ಯವಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಗಳು ದೊರಕುತ್ತಿವೆ’ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ಸ್ವಾಮಿ ಮಾತನಾಡಿ, ‘ಕುಷ್ಠರೋಗ ಚರ್ಮ ಹಾಗೂ ನರಕ್ಕೆ ಸಂಬಂಧಪಟ್ಟದ್ದಾಗಿದೆ. ದೇಹದ ಮೇಲೆ ಯಾವುದೇ ತರಹದ ಮಚ್ಚೆಗಳು ಇದ್ದಲ್ಲಿ, ಸ್ಪರ್ಶ ಅನುಭವಕ್ಕೆ ಬಾರದಿದ್ದರೆ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರಿಂದ ಪರೀಕ್ಷಿಸಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಮಹೇಶ ಬಿರಾದಾರ ಮಾತನಾಡಿ, ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯತಿಥಿಯನ್ನು ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ದಿನವಾಗಿ ಆಚರಿಸಲಾಗುತ್ತಿದೆ. ವಿಶ್ವದಲ್ಲಿನ ಕುಷ್ಠರೋಗಿಗಳ ಅನುಪಾತಕ್ಕೆ ಹೋಲಿಸಿದಾಗ 100ರಲ್ಲಿ 60ರಷ್ಟು ಕುಷ್ಠರೋಗಿಗಳು ಭಾರತದಲ್ಲಿ ಇದ್ದಾರೆ. ಇದು ಅನುವಂಶಿಕವಾಗಿ ಬರುವ ರೋಗವಲ್ಲ. ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದೆ‘ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ.ಬಿ, ಡಾ.ಶರಣಯ್ಯ ಸ್ವಾಮಿ, ಡಾ.ಸಂಜುಕುಮಾರ ಪಾಟೀಲ, ಡಾ.ಶಂಕ್ರೆಪ್ಪ ಬಮ್ಮಾ, ಡಾ. ರಶೀದ್, ಆರೋಗ್ಯ ಶಿಕ್ಷಣ ಅಧಿಕಾರಿ ಓಂಕಾರ, ರಾಜೇಶ ಚಂದ್ರಕಾಂತ ಪಾಟೀಲ, ಸತ್ತಾರ್ ಪಟೇಲ್, ಮಹೇಶ ರೆಡ್ಡಿ, ಉಮೇಶ, ಕಾಶೀನಾಥ, ಗೋರಖನಾಥ ಇದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಸಂಗಮೇಶ ಕಾಂಬಳೆ ಪ್ರತಿಜ್ಞೆ ವಿಧಿ ಬೋಧಿಸಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು. ಮಲ್ಲಿಕಾರ್ಜುನ ಗುಡ್ಡೆ ಸ್ವಾಗತಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.