ADVERTISEMENT

ಬೀದರ್‌: ಎನ್‌ಇಪಿ ರದ್ದುಗೊಳಿಸದಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಮೇ 2024, 9:57 IST
Last Updated 15 ಮೇ 2024, 9:57 IST
   

ಬೀದರ್‌: ರಾಷ್ಟ್ರೀಯ ಶಿಕ್ಷಣ ನೀತಿ–2020 ರದ್ದುಗೊಳಿಸದಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ಆನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಬ್ರಿಟಿಷರು ಜಾರಿಗೆ ತಂದಿದ್ದ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣ ಪಡೆಯುವಂತಾಗಬೇಕು ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿ ಜಾರಿಗೆ ತಂದಿದೆ. ಯಾವುದೇ ಕಾರಣಕ್ಕೆ ಇದನ್ನು ಹಿಂಪಡೆಯಬಾರದು. ಭಾರತೀಯ ಶಿಕ್ಷಣ ನೀತಿ ಜಾರಿಗೊಳಿಸಿದರೆ ಕೌಶಲಯುಕ್ತ, ಯುವಶಕ್ತಿ ನಿರ್ಮಾಣಕ್ಕೆ ಆಸ್ಪದ ಮಾಡಿಕೊಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಎನ್‌ಇಪಿ ಅನುಷ್ಠಾನಗೊಳಿಸಿದ ಮೊದಲ ರಾಜ್ಯ ಕರ್ನಾಟಕ. ಚುನಾವಣಾ ಪ್ರಣಾಳಿಕೆಯಲ್ಲಿ ಎನ್‌ಇಪಿ ತೆಗೆಯುವುದಾಗಿ ಹೇಳಿದ ಕಾರಣಕ್ಕಾಗಿಯೇ ಹೊಸ ಶಿಕ್ಷಣ ನೀತಿಯನ್ನು ಬದಲಾಯಿಸಲು ರಾಜ್ಯ ಸರ್ಕಾರ ಹೊರಟಿದೆ. ಸರ್ಕಾರದ ಈ ನಡೆಯನ್ನು ಎಬಿವಿಪಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.

ಮುಂದಿನ 20ರಿಂದ 25 ವರ್ಷಗಳನ್ನು ಗಮನದಲ್ಲಿ ಇರಿಸಿಕೊಂಡು ಇಡೀ ದೇಶಕ್ಕೆ ಅನ್ವಯವಾಗುವಂತಹ ಒಂದೇ ಬಗೆಯ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರವು ರಾಷ್ಟ್ರೀಯತೆಯನ್ನು ತುಂಡರಿಸಿ, ಪ್ರತ್ಯೇಕತೆಯತ್ತ ಹೆಜ್ಜೆ ಇರಿಸುತ್ತಿರುವುದು ಸರಿಯಲ್ಲ. ರಾಜ್ಯದ ಬೆಳೆವಣಿಗೆಗೆ ಇದು ಹಿನ್ನಡೆಯಾಗಲಿದೆ. ಕೂಡಲೇ ರಾಜ್ಯ ಸರ್ಕಾರವು ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕಲೇ, ರಾಜ್ಯ ಕಾರ್ಯಕಾರಿ ಸದಸ್ಯ ಸಾಯಿ ಭೋಸ್ಲೆ, ತಾಲ್ಲೂಕು ಸಂಚಾಲಕ ಅಂಬ್ರೇಶ ಬಿರಾದಾರ, ನಾಗರಾಜ, ಅಮರ ಸ್ವಾಮಿ, ಅಭಿಷೇಕ್ ಶಂಭು, ಮಹೇಶ್ ಆನಂದ್, ಸಿದ್ದರಾಮೇಶ್ವರ, ಪವನ್ ಪಾಂಚಾಳ್, ಶಿವಶರಣು ಸಂಗಮೇಶ್ ಮುಳೆ, ಪೂಜಾ, ಅಂಬಿಕಾ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.