ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಜೀರ್ಗಾ (ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರ ಗಾಯಗಳಾಗಿವೆ. ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಎರಡು ಗಂಟೆಗೂ ಹೆಚ್ಚು ಸಮಯ ಪ್ರತಿಭಟನೆ ನಡೆಸಿದರು.
ಜೀರ್ಗಾ (ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಔರಾದ್ ಕಡೆಯಿಂದ ವೇಗವಾಗಿ ಬಂದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ಖಂಡಿಸಿ ಗ್ರಾಮಸ್ಥರು ದಿಢೀರ್ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವುದನ್ನು ಖಂಡಿಸಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಔರಾದ್ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಿಪಿಐ ಆರ್.ಕೆ.ಠಾಕೂರ್, ಸಂತಪುರ ಠಾಣೆ ಪಿಎಸ್ಐ ನಂದಕುಮಾರ್ ಭೇಟಿ ನೀಡಿದರು. ಪ್ರತಿಭಟನೆಯಿಂದ ಶಾಲಾ-ಕಾಲೇಜು, ದೈನಂದಿನ ಕೆಲಸಗಳಿಗೆ ತೆರಳುವವರು ಸಮಸ್ಯೆ ಎದುರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.