ಬೀದರ್: ‘ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್ಎಸ್‌ಕೆ) ಇದೇ ವರ್ಷ ಆರಂಭಿಸಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.
ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಕಾರ್ಖಾನೆಗೆ ₹ 20 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.
‘ನಗರದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭಿಸುವ ಭಾಗವಾಗಿ ಕಟ್ಟಡ ಕಾಮಗಾರಿ ನಡೆದಿದೆ. ಕಟ್ಟಡಕ್ಕೆ ₹100 ಕೋಟಿ ಅಗತ್ಯವಿದ್ದು, ಮೊದಲ ಹಂತದಲ್ಲಿ ₹ 50 ಕೋಟಿ ಬಿಡುಗಡೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಹೇಳಿದರು.
‘ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು. ಶಿಕ್ಷಣ, ಆರೋಗ್ಯ, ಉದ್ಯೋಗ, ಕೈಗಾರಿಕೆ, ನೀರಾವರಿ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ಕೊಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ತಿಳಿಸಿದರು.
‘ದೇಶಕ್ಕೆ 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರಕಿತು. ಆದರೆ, ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಆ ಭಾಗ್ಯ ಸಿಗಲಿಲ್ಲ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಗಟ್ಟಿ ನಿರ್ಧಾರದಿಂದಾಗಿ ನಿಜಾಮರಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತು. ಪಟೇಲ್ ಅವರನ್ನು ನಾವೆಲ್ಲರೂ ಸ್ಮರಿಸಬೇಕಿದೆ’ ಎಂದು ಹೇಳಿದರು.
ಶಾಸಕ ರಹೀಂಖಾನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ನಗರಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಡಾ. ಪ್ರಕಾಶ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಇದ್ದರು.
ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ಪಡೆ, ಗೃಹ ರಕ್ಷಕ ದಳ, ಅರಣ್ಯ ರಕ್ಷಕರು, ಎನ್‍ಎಸ್‍ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾ ದಳ ಹಾಗೂ ಆಶಾಕಿರಣ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಕವಾಯತು ಮೈದಾನದವರೆಗೆ ಅಲಂಕೃತ ವಾಹನದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಚಿತ್ರದ ಮೆರವಣಿಗೆ ನಡೆಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.