ADVERTISEMENT

ಬೀದರ್‌ | ಕೆಲಸಕ್ಕೆ ಮಕ್ಕಳ ನಿಯೋಜನೆ ಅಪರಾಧ: ನ್ಯಾಯಧೀಶ ಪ್ರಭು ಎನ್.ಬಡಿಗೇರ್

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ನ್ಯಾಯಧೀಶ ಪ್ರಭು

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 16:17 IST
Last Updated 12 ಜೂನ್ 2024, 16:17 IST
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಪ್ರಧಾನ ಸಿವಿಲ್ ನ್ಯಾಯಧೀಶ ಪ್ರಭು ಎನ್.ಬಡಿಗೇರ್ ಉದ್ಘಾಟಿಸಿದರು
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಪ್ರಧಾನ ಸಿವಿಲ್ ನ್ಯಾಯಧೀಶ ಪ್ರಭು ಎನ್.ಬಡಿಗೇರ್ ಉದ್ಘಾಟಿಸಿದರು   

ಬೀದರ್‌: ‘14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು, 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ’ ಎಂದು ಪ್ರಧಾನ ಸಿವಿಲ್ ನ್ಯಾಯಧೀಶ ಪ್ರಭು ಎನ್.ಬಡಿಗೇರ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡತನದ ಬೇಗೆಯಿಂದ ಕೆಲವು ಪಾಲಕರು 14 ವರ್ಷದೊಳಗಿನ ತಮ್ಮ ಮಕ್ಕಳನ್ನು ವಿವಿಧ ಕಾಮಗಾರಿಗಳಲ್ಲಿ ಕೆಲಸಕ್ಕೆ ದೂಡಿ ಶಿಕ್ಷಣ ವಂಚಿತರನ್ನಾಗಿ ಮಾಡಿ ಸಣ್ಣ ವಯಸ್ಸಿನಲ್ಲಿಯೇ ದುಡಿಮೆಗೆ ಕಳುಹಿಸುತ್ತಿರುವುದು ಸರಿಯಲ್ಲ. ಅಂತಹ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ADVERTISEMENT

ಮುಂದಿನ ದಿನಗಳಲ್ಲಿ ದೇಶದ ಚುಕ್ಕಾಣಿ ಹಿಡಿಯುವಂತಹ ಮಕ್ಕಳು ಇಂದು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕೆ ನಾವೆಲ್ಲರೂ ಸೇರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೋಡೋಣ ಎಂದು ಹೇಳಿದರು.

ಶಾಲಾ ಮಕ್ಕಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧಿಕಾರಿ ಶ್ರೀಹರಿ ದೇಶಪಾಂಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಜೀಯಾ ಬಳಬಟ್ಟಿ, ಮಕ್ಕಳ ಕಲ್ಯಾಣ ಸಮಿತಿಯ ಮಂಜುಳಾ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯ ಅರ್ಜುನ ಎಸ್., ಕಾರ್ಮಿಕ ಇಲಾಖೆಯ ಇನ್‌ಸ್ಪೆಕ್ಟರ್‌ ಕೆ.ಸುವರ್ಣಾ, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಎ.ಕೆ.ಜೋಶಿ, ಸಿಡಿಪಿಒ ಶಾರದಾ ಹಾಜರಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಜನಜಾಗೃತಿ ಜಾಥಾ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.