ADVERTISEMENT

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ನಿರ್ಧಾರ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 6:43 IST
Last Updated 22 ಅಕ್ಟೋಬರ್ 2024, 6:43 IST
ಬೀದರ್‌ನಲ್ಲಿ ಸೋಮವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು
ಬೀದರ್‌ನಲ್ಲಿ ಸೋಮವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು   

ಬೀದರ್‌: ನವೆಂಬರ್‌ 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ನಗರದಲ್ಲಿ ಸೋಮವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಕನ್ನಡ ರಾಜ್ಯೋತ್ಸವದ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ರಾಜ್ಯೋತ್ಸವದ ಹಿಂದಿನ ದಿನ ಎಲ್ಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆ ಕೈಗೊಂಡು, ವಿದ್ಯುತ್‌ ದೀಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ನ. 1ರಂದು ಬೆಳಿಗ್ಗೆ 7.45ಕ್ಕೆ ಎಲ್ಲ ಸರ್ಕಾರಿ ಹಾಗೂ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ಧ್ವಜಾರೋಹಣ ಮಾಡಬೇಕು. ಎಲ್ಲ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಬೆಳಿಗ್ಗೆ 7.50ಕ್ಕೆ ಬಸವೇಶ್ವರ ವೃತ್ತದಲ್ಲಿ ಸೇರಬೇಕು. ಬೆಳಿಗ್ಗೆ 8ಕ್ಕೆ ಅಲ್ಲಿಂದ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆ ಜರುಗಲಿದೆ. ವಿವಿಧ ಮಾರ್ಗಗಳ ಮೂಲಕ ಮೆರವಣಿಗೆಯೂ ನಗರದ ನೆಹರೂ ಕ್ರೀಡಾಂಗಣ ತಲುಪಲಿದೆ ಎಂದು ತಿಳಿಸಿದರು.

ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಧ್ವಜಾರೋಹಣ ನೆರವೇರಿಸುವರು. ಪೊಲೀಸರು, ಗೃಹರಕ್ಷಕರು ಸೇರಿದಂತೆ ವಿವಿಧ ತುಕಡಿಗಳಿಂದ ಪಥ ಸಂಚಲ ನಡೆಯಲಿದೆ. ಆನಂತರ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸುವರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ ಕಾರ್ಯಕ್ರಮದ ಅಂಗವಾಗಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗುವುದು. ಶಿಕ್ಷಣ ಇಲಾಖೆಯವರು ಅದಕ್ಕೆ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಅ. 28ರಂದು ಕಾವ್ಯ ಕುಂಚ ಗಾಯನ, 29ರಂದು ಕವಿಸಮ್ಮೇಳನ–ಕವಿಗೋಷ್ಠಿ ಹಾಗೂ 30ರಂದು ಜಾನಪದ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಉಪವಿಭಾಗಾಧಿಕಾರಿ ಮುಹಮ್ಮದ್‌ ಶಕೀಲ್‌ ವೇದಿಕೆಯ ಮೇಲೆ ಹಾಜರಿದ್ದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.