ADVERTISEMENT

ಬೀದರ್‌: ಸಂಭ್ರಮದ ಕನಕದಾಸರ ಜಯಂತಿ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 14:21 IST
Last Updated 12 ನವೆಂಬರ್ 2024, 14:21 IST
ಬೀದರ್‌ನಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು
ಬೀದರ್‌ನಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು   

ಬೀದರ್‌: ಭಕ್ತ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ನಗರದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧ್ಯಕ್ಷತೆಯಲ್ಲಿ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು.

ನ. 18ರಂದು ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸಂಸ್ಥೆಗಳಲ್ಲಿ ಬೆಳಿಗ್ಗೆ 9.30ಕ್ಕೆ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ 10 ಗಂಟೆಗೆ ಪೂಜೆ ಸಲ್ಲಿಸಲಾಗುವುದು. 10.30ಕ್ಕೆ ಮಹಾತ್ಮ ಬೊಮಗೊಂಡೇಶ್ವರ ವೃತ್ತದಿಂದ ದಾಸ ಶ್ರೇಷ್ಠ ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದರು.

ADVERTISEMENT

ಬಸವೇಶ್ವರ ವೃತ್ತ, ಭಗತ್‌ ಸಿಂಗ್‌ ವೃತ್ತ, ಡಾ.ಅಂಬೇಡ್ಕರ್‌ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮೂಲಕ ರಂಗಮಂದಿರ ತಲುಪಲಿದೆ. ಮಧ್ಯಾಹ್ನ 2ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅಂದು ಶಾಲಾ-ಕಾಲೇಜುಗಳಲ್ಲಿ ಕನಕದಾಸರ ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

‘ಮೆರವಣಿಗೆಯಲ್ಲಿ ಮೂರು ಕಲಾ ತಂಡಗಳು ಹಾಗೂ ದಾಸರ ಪದಗಳನ್ನು ಹಾಡಿಸುವ ವ್ಯವಸ್ಥೆ ಮಾಡಬೇಕು. ನಗರಸಭೆಯಿಂದ ಎಲ್ಲ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು. ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ರಂಗಮಂದಿರದಲ್ಲಿ ಅತಿಥಿ ಉಪನ್ಯಾಸಕರಿಂದ ಉಪನ್ಯಾಸ ವ್ಯವಸ್ಥೆ ಮಾಡಲಾಗುವುದು’ ಎಂದರು.

ಉಪವಿಭಾಗಾಧಿಕಾರಿ ಎಂ.ಡಿ. ಶಕೀಲ್‌, ಮುಖಂಡರಾದ ಬಾಬುರಾವ್‌ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ, ಪೀರಪ್ಪ ಯರನಳ್ಳಿ, ಮಾಳಪ್ಪ ಅಡಸಾರೆ, ಸಂತೋಷ ಜೋಳದಪಕಾ, ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.