ಬೀದರ್: ‘ಮುಸ್ಲಿಂ ಮಹಿಳೆಯರ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಕಾರಿ ಮಾತನಾಡಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಸಂಬಂಧ ಸಮಿತಿ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.
2023ರ ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡ, ಜೀವನಪೂರ್ತಿ ಪರ್ಮನೆಂಟ್ ಗಂಡನೇ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ’ ಎಂದು ಹೇಳಿ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಬೆಂಕಿ ಹಚ್ಚುವಂತಹ, ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವ ಕೆಲಸ ಮಾಡಿದ್ದಾರೆ. ಯಾವುದೇ ಧರ್ಮ, ಜಾತಿಗೆ ಸೇರಿದ ಮಹಿಳೆಯನ್ನು ಅವಮಾನಿಸುವುದು ಸರಿಯಲ್ಲ. ಕೂಡಲೇ ಪ್ರಭಾಕರ್ ಭಟ್‌ನನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕಾಂತರಾಜ ಆಯೋಗದ ವರದಿ ಜಾರಿಗೆ ತರಬೇಕು. ಜ.26ರಂದು ಎಲ್ಲ ಇಲಾಖೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಿಸಬೇಕು. ಆಚರಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪೂರ, ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಲಾಧಾ, ಔರಾದ್ ತಾಲ್ಲೂಕು ಸಂಚಾಲಕ ಜೈಪ್ರಕಾಶ ಅಷ್ಟೂರೆ, ಭಾಲ್ಕಿ ತಾಲ್ಲೂಕು ಸಂಚಾಲಕ ಆಕಾಶ ಸಿಂಧೆ, ಪ್ರಮುಖರಾದ ಜಗದೀಶ ಸೋನಿ, ಪ್ರಭುರಾವ ಬಾಚೆಪಳ್ಳಿ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.