ಬೀದರ್: ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ನಗರದ ವಿವಿಧೆಡೆ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಗರದ ರಾಂಪುರೆ ಬಡಾವಣೆಯಲ್ಲಿನ ಬ್ಯಾಂಕ್ ಕಾಲೊನಿಯಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, ವಾರ್ಡ್ ಸಂಖ್ಯೆ 29 ಮತ್ತು 30ರ ವಿವಿಧ ಬಡಾವಣೆಯಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯದ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ಒದಗಿಸಿದೆ. ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಸರ್ವ ಜನರ, ಎಲ್ಲ ಕ್ಷೇತ್ರಗಳ ಅಭಿವೃದ್ಧಿ ನಿಟ್ಟಿನಲ್ಲಿ ಭರಪೂರ ಅನುದಾನ ಒದಗಿಸಿದ್ದಾರೆ ಎಂದು ತಿಳಿಸಿದರು.
ಕಾಮಗಾರಿಗಳನ್ನು ಗುಣಮಟ್ಟದಿಂದ ನಡೆಸಬೇಕು ಹಾಗೂ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಹೇಳಿದರು.
ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿ ಹೊಸಳ್ಳಿ, ಪ್ರಭುಶೆಟ್ಟಿ ಪಾಟೀಲ, ಪ್ರಮುಖರಾದ ಧನರಾಜ ಹಂಗರಗಿ, ರಾಜೇಂದ್ರಕುಮಾರ ಗಂದಗೆ, ಬಾಬುರಾವ್ ದಾನಿ, ಸುಭಾಷರಡ್ಡಿ, ಮೀನಾಕ್ಷಿ ಅನಿಲ, ದತ್ತು ಪಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.