ADVERTISEMENT

ಕೇಂದ್ರದಿಂದ ಬರ ಪರಿಹಾರ ಘೋಷಣೆ: ರಾಜ್ಯಕ್ಕೆ ಸಂದ ಜಯ ಎಂದ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 8:11 IST
Last Updated 27 ಏಪ್ರಿಲ್ 2024, 8:11 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೀದರ್‌: ‘ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಭಾಲ್ಕಿಯಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ಪ್ರಕಾರ ₹18,171 ಕೋಟಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯದ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು.

ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ ₹3,454 ಕೋಟಿ ಪರಿಹಾರ ಮಾತ್ರ ಘೋಷಿಸಿದೆ. ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಖಂಡ್ರೆ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.