ಬೀದರ್: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2020-21ನೇ ಸಾಲಿನ ಕಳೆದ ಸೆಪ್ಟೆಂಬರ್‍ವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗಳ ಅಡಿಯ ಇಲಾಖಾವಾರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ವೈಯಕ್ತಿಕವಾಗಿ ಗಮನ ಹರಿಸಬೇಕು. ಅತಿ ಜರೂರಿ ಎಂದು ಪರಿಗಣಿಸಿ ಭೌತಿಕ ಮತ್ತು ಆರ್ಥಿಕ ಸಾಧನೆಗೆ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು.
ಅನುದಾನ ಬಂದಿಲ್ಲ ಎನ್ನುವ ಕಾರಣ ಹೇಳಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಗಳ ಪ್ರಗತಿಗೆ ಒತ್ತು ಕೊಡದಿದ್ದಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗುವವರೆಗೆ ಕಾಯದೆ ಫಲಾನುಭವಿಗಳ ಆಯ್ಕೆಗೆ ಮೊದಲ ಆದ್ಯತೆ ನೀಡಬೇಕು. ಬಳಿಕ ಭೌತಿಕ ಸಾಧನೆ ಅನುಸಾರ ಅನುದಾನ ಕೇಳಿ ಆರ್ಥಿಕ ಪ್ರಗತಿಗೆ ಗಮನ ಹರಿಸಬೇಕು ಎಂದು ಸೂಚಿಸಿದರು.
ಎಸ್‍ಸಿಪಿ ಮತ್ತು ಟಿಎಸ್‍ಪಿ ಪ್ರಗತಿ ಸಭೆಗೆ ಕೆಲ ಅಧಿಕಾರಿಗಳು ವಿಳಂಬವಾಗಿ ಆಗಮಿಸಿದ್ದಕ್ಕೆ ಮತ್ತು ಅಸಮರ್ಪಕ ಮಾಹಿತಿ ನೀಡಿದ್ದಕ್ಕೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಾಹಿತಿಯನ್ನು ಅಸಮರ್ಪಕವಾಗಿ ನೀಡಿದ ಹಾಗೂ ಸಭಾ ಸೂಚನೆ ಪತ್ರ ತಲುಪಿಸಿದರೂ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಆದೇಶಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಸರೋಜಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.