ADVERTISEMENT

ಖೂಬಾಗೆ ಅಭಿವೃದ್ಧಿಯ ದೂರದೃಷ್ಟಿ ಇಲ್ಲ: ಆರೋಪ

ಕಾಂಗ್ರೆಸ್ ಹಿರಿಯ ಮುಖಂಡ ಬಸವರಾಜ ಬುಳ್ಳಾ ಟೀಕೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 16:12 IST
Last Updated 5 ಫೆಬ್ರುವರಿ 2024, 16:12 IST
ಬಸವರಾಜ ಬುಳ್ಳಾ
ಬಸವರಾಜ ಬುಳ್ಳಾ   

ಭಾಲ್ಕಿ: ಬೀದರ್ ಲೋಕಸಭೆ ಕ್ಷೇತ್ರದ ಹಾಲಿ ಸಂಸದ, ಕೇಂದ್ರದ ರಾಜ್ಯ ಸಚಿವ ಭಗವಂತ ಖೂಬಾಗೆ ಅಭಿವೃದ್ಧಿಯ ದೂರದೃಷ್ಟಿ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಸವರಾಜ ಬುಳ್ಳಾ ಟೀಕಿಸಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ಜಿಲ್ಲೆ ಬೀದರ್ ನೆರೆಯ ತೆಲಂಗಾಣ, ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿರುವ ಕಾರಣಕ್ಕೆ ಒಂದಷ್ಟು ರಾಷ್ಟ್ರೀಯ ಹೆದ್ದಾರಿ ಕಾಣುತ್ತಿವೆ. ಅವುಗಳನ್ನು ನಾನೇ ಮಾಡಿಸಿರುವುದಾಗಿ ಖೂಬಾ ಹೇಳುತ್ತಿರುವುದು ಹಾಸ್ಯಸಾಸ್ಪದ. ಖೂಬಾ ಅವರಿಗೆ ಯಾವುದೇ ಗೊತ್ತು ಗುರಿಯಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎಂದು ದೂರಿದರು.

ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ಈ ಬಾರಿ ಜನ ತಿರಸ್ಕರಿಸಿ ಕಾಂಗ್ರೆಸ್ ನೇತೃತ್ವದ ಜಾತ್ಯತೀತ ಸರ್ಕಾರವನ್ನು ಕೇಂದ್ರದಲ್ಲಿ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‌

ADVERTISEMENT

ಬೀದರ್ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ನಾಲ್ಕು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದೇನೆ. ಕಳೆದ ಮೂರು ಅವಧಿಯಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಕೂಡ ಪಕ್ಷ ಯಾರಿಗೆ ಟಿಕೆಟ್ ನೀಡಿದೆ ಅವರ ಪರವಾಗಿ ಯಾವುದೇ ಅಪಸ್ವರ ಎತ್ತದೆ ಅವರ ಗೆಲುವಿಗೆ ಶ್ರಮಿಸಿದ್ದೇನೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷ ನನ್ನನ್ನು ಪರಿಗಣಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ವಿಷಯವಾಗಿ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.