ಬೀದರ್: ‘ಜಿಲ್ಲೆಯಲ್ಲಿ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಬನಸೋಡೆ ಹೇಳಿದರು.
ಲೋಕ ಅದಾಲತ್ ದಿನ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿ ಪಾಲು, ಇಬ್ಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್, ಕಂದಾಯ ಅಪರಾಧ, ಕಾರ್ಮಿಕರು ಬ್ಯಾಂಕ್‍ಗೆ ಸಂಬಂಧಿಸಿದ ಹಾಗೂ ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯಲ್ಲಿ ಬಾಕಿಯಿದ್ದ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 17,485 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು. ಈ ಬಾರಿಯೂ ಅಧಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಯೋಜನೆ ರೂಪಿಸಲಾಗಿದೆ. ನವೆಂಬರ್ 14ರ ಪ್ರಕಾರ ಜಿಲ್ಲೆಯಲ್ಲಿ 29,789 ಪ್ರಕರಣಗಳು ಬಾಕಿಯಿವೆ. ಈ ಪೈಕಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ರಾಜಿ ಸಂಧಾನ ಮಾಡಿಕೊಳ್ಳುವ ಕಕ್ಷಿದಾರರಿಗೆ ನ್ಯಾಯಾಲಯದ ಶುಲ್ಕ ಮರಳಿ ಸಿಗಲಿದೆ. ಮೇಲ್ಮನಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಕಕ್ಷಿದಾರರು ಲೋಕ ಅದಾಲತ್ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.