ADVERTISEMENT

ಬೀದರ್ ಜಿಲ್ಲೆಯಲ್ಲಿ ಮಲೇರಿಯಾ ಇಳಿಮುಖ

ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಡಿಎಚ್‍ಒ ಮಾಹಿತಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:42 IST
Last Updated 18 ಜೂನ್ 2020, 2:42 IST
ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಬೀದರ್‌ನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ಮಲೇರಿಯಾ ತಡೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು
ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಬೀದರ್‌ನಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗ್ಯಾನೇಂದ್ರಕುಮಾರ ಗಂಗ್ವಾರ್ ಅವರು ಮಲೇರಿಯಾ ತಡೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು   

ಬೀದರ್: ಜಿಲ್ಲೆಯಲ್ಲಿ ಮಲೇರಿಯಾ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ತಿಳಿಸಿದರು.
ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

ಕಳೆದ ವರ್ಷ ಜಿಲ್ಲೆಯಲ್ಲಿ ಕೇವಲ 16 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 12 ಜನ ಹೊರ ರಾಜ್ಯಗಳ ವಲಸಿಗರಾಗಿದ್ದಾರೆ. ನಾಲ್ವರು ಮಾತ್ರ ಜಿಲ್ಲೆಯವರಾಗಿದ್ದಾರೆ ಎಂದು ಹೇಳಿದರು.

ಚಿಕಿತ್ಸೆ ಮೂಲಕ ಮಲೇರಿಯಾ ರೋಗಿಗಳನ್ನು ಗುಣಪಡಿಸಲಾಗಿದೆ. ಈ ರೋಗದಿಂದ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 2017 ರಲ್ಲಿ 39, 2018 ರಲ್ಲಿ 22 ಹಾಗೂ 2019 ರಲ್ಲಿ 16 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಪ್ರಸಕ್ತ ಸಾಲಿನಲ್ಲಿ ಮೇ ವರೆಗೆ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಅನಿಲ ಚಿಂತಾಮಣಿ ಹೇಳಿದರು.

ADVERTISEMENT

2025 ರ ವೇಳೆಗೆ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಮಲೇರಿಯಾ ತಡೆಯಲು ಡಿಡಿಟಿ ಸಿಂಪರಣೆ, ಜ್ವರ ಪೀಡಿತರ ಸಮೀಕ್ಷೆ, ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಂಡು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿಯಂತ್ರಿಸಿದ್ದಲ್ಲ್ಲಿ ಮಲೇರಿಯಾ ಹಾಗೂ ಇತರ ಸೊಳ್ಳೆ ಜನಿತ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಹೇಳಿದರು.

‘ಶೂನ್ಯ ಮಲೇರಿಯಾ ನನ್ನಿಂದಲೇ ಪ್ರಾರಂಭ’ ಘೋಷವಾಕ್ಯದೊಂದಿಗೆ ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲಾ ಕಾಲೇಜುಗಳಲ್ಲಿ ಮಲೇರಿಯಾ ಮಾಸಾಚರಣೆ ಜಾಗೃತಿ ಜಾಥಾ ಹಾಗೂ ಸಭೆಗಳನ್ನು ಹಮ್ಮಿಕೊಳ್ಳಬೇಕು. ಕೊರೊನಾ ಸೋಂಕಿನ ಕಾರಣ ಸುರಕ್ಷಿತ ಅಂತರ ಕಾಪಾಡಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ನಿರಂತರ ಸೊಳ್ಳೆ ತಾಣಗಳ ಸಮೀಕ್ಷೆ, ನಗರ ಪ್ರದೇಶದಲ್ಲಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಸೊಳ್ಳೆ ಉತ್ಪತ್ತಿಯಾಗದಂತೆ ಪ್ರತಿ ಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಬೇಕು. ಲಾರ್ವಾಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ಮಳೆಗಾಲ ಆರಂಭವಾಗಿರುವುದರಿಂದ ಅಲ್ಲಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರತಿಕಾಂತ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಗೌತಮ ಶಿಂಧೆ, ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ರವೀಂದ್ರ ಸಿರಸಗೆ, ಡಾ. ಇಂದುಮತಿ ಪಾಟೀಲ, ಡಾ. ರಾಜಶೇಖರ ಪಾಟೀಲ, ಡಾ. ಶರಣಯ್ಯ ಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.