ADVERTISEMENT

ಬೀದರ್‌: ನೀಟ್‌ ಅಕ್ರಮ; ನ್ಯಾಯಾಂಗ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 14:14 IST
Last Updated 13 ಜೂನ್ 2024, 14:14 IST
‘ನೀಟ್‌’ ಗೊಂದಲದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಸಂಘಟನೆಯ ಕಾರ್ಯಕರ್ತರು ಬೀದರ್‌ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು
‘ನೀಟ್‌’ ಗೊಂದಲದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ ಎಐಡಿಎಸ್‌ಒ ಸಂಘಟನೆಯ ಕಾರ್ಯಕರ್ತರು ಬೀದರ್‌ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್‌: ‘ನೀಟ್‌’ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌’ (ಎಐಡಿಎಸ್‌ಒ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಹ ಸಂಚಾಲಕ ವೆಂಕಟೇಶ ದೇವದುರ್ಗ, ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಕೆಲ ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಸಿ ನೀಡಿದೆ. ಆದರೆ, ಹೆಚ್ಚುವರಿ ಅಂಕಗಳು ನೀಡಿರುವ ಮಾನದಂಡ ಸಂಪೂರ್ಣವಾಗಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದರು.

ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು. ಆದರೆ, ಅದರ ಬಗ್ಗೆ ತನಿಖೆ ನಡೆಸಿಲ್ಲ. ಕೆಟ್ಟ ಫಲಿತಾಂಶದಿಂದಾಗಿ ಈಗಾಗಲೇ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಯಾಂಗ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುತ್ತದೆ ಎಂದರು.

ADVERTISEMENT

ಈ ಹಿಂದೆ ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ, ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ಅದೀಗ ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ ಎಂದರು.  ಸಂಘಟನೆಯ ಕಾರ್ಯಕರ್ತರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.