ADVERTISEMENT

ಬೀದರ್ |ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 16:12 IST
Last Updated 19 ಏಪ್ರಿಲ್ 2024, 16:12 IST
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಬೀದರ್‌: ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

‘ಜ್ಞಾನ ದೇಗುಲದಲ್ಲಿ ವಿದ್ಯಾರ್ಥಿನಿ ಹತ್ಯೆ ನಡೆದಿರುವುದು ಖಂಡನಾರ್ಹ. ಈ ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದಂತಾಗಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಜಿಹಾದಿ ಕ್ರೂರ ಮನಃಸ್ಥಿತಿಯ ಫಯಾಜ್‌ ಎಂಬಾತ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಕುಸಿದಿದೆ ಎನ್ನುವುದನ್ನು ಈ ಘಟನೆ ತೋರಿಸುತ್ತದೆ’ ಎಂದು ಮನವಿಯಲ್ಲಿ ತಿಳಿಸಿದರು.

ADVERTISEMENT

ಕೊಲೆಗಾರನಿಗೆ ಕಾನೂನಿನ ಯಾವುದೇ ಭಯ ಇಲ್ಲದೆ ರಾಜಾರೋಷವಾಗಿ ಕಾಲೇಜಿನ ಪ್ರಾಂಗಣದಲ್ಲಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದಾನೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಪೊಲೀಸರು ರಾಜ್ಯದ ಶಾಲಾ–ಕಾಲೇಜುಗಳ ಬಳಿ ಮಫ್ತಿಯಲ್ಲಿ ಕೆಲಸ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಕಾರ್ಯದರ್ಶಿ ನಾಗರಾಜ, ಸಾಯಿ ಕಿರಣ್, ಅಭಿಷೇಕ್, ಶಂಭು, ವಿಶ್ವೇಶ್ವರ, ರಾಜಕುಮಾರ, ಶ್ವೇತಾ, ಸ್ವಾತಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.