ADVERTISEMENT

ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

ಬೇರೆ ಶಾಲೆಗೆ ಹೋಲಿಸಿದರೆ ಇಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ದುಪ್ಪಟ್ಟು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 7:26 IST
Last Updated 8 ಸೆಪ್ಟೆಂಬರ್ 2022, 7:26 IST
ಖಟಕಚಿಂಚೋಳಿ ಸಮೀಪದ ಮಾಸಿಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೋಟ
ಖಟಕಚಿಂಚೋಳಿ ಸಮೀಪದ ಮಾಸಿಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೋಟ   

ಖಟಕಚಿಂಚೋಳಿ: ಸಮೀಪದ ಮಾಸಿಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಶಿಕ್ಷಕರನ್ನು ನೇಮಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸದ್ಯ ಶಾಲೆಯಲ್ಲಿ 203 ಮಕ್ಕಳ ಹಾಜರಾತಿ ಇದೆ. ಇದರಲ್ಲಿ ಶೇ 90 ರಷ್ಟು ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗೆ ಹಾಜರಾಗುತ್ತಾರೆ. ಆದರೆ ಶಿಕ್ಷಕರ ಸಂಖ್ಯೆ ಕಡಿಮೆ ಇರುವುದರಿಂದ ಮಕ್ಕಳ ಕಲಿಕೆಗೆ ತೊಡಕಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ಚುವರಿ ಶಿಕ್ಷಕರನ್ನು ನೇಮಿಸಬೇಕು ಎಂದು ಎಸ್ ಡಿ.ಎಂ.ಸಿ ಅಧ್ಯಕ್ಷ ಕರಿಬಸಪ್ಪ ಧೂಳಾ ಆಗ್ರಹಿಸುತ್ತಾರೆ.

‘ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಅದರಲ್ಲಿ ಮಾಸಿಮಾಡ ಸರ್ಕಾರಿ ಶಾಲೆಯಲ್ಲಿ ಬೇರೆ ಗ್ರಾಮದ ಶಾಲೆಗೆ ಹೋಲಿಸಿದರೆ ದಾಖಲಾತಿ ಪ್ರಮಾಣ ದುಪ್ಪಟ್ಟಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚುವರಿ ಶಿಕ್ಷಕರನ್ನು ನೇಮಿಸಬೇಕು’ ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್ ಒತ್ತಾಯಿಸುತ್ತಾರೆ.

ADVERTISEMENT

‘ಜಿಲ್ಲೆಯ ಬಹುತೇಕ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ತೀರಾ ಕಡಿಮೆ ಇದೆ. ಆದರೆ ನಮ್ಮ ಗ್ರಾಮದ ಶಾಲೆಯಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಿದೆ. ಆದರೆ ಶಿಕ್ಷಕರ ಕೊರತೆಯಿರುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಪಾಲಕ ವಿಜಯಕುಮಾರ ತೆಗಂಪುರ ಅಸಮಾಧಾನ ವ್ಯಕ್ತಪಡಿಸುತ್ತಾರೆ. ‘ಪಕ್ಕದ ನೆಲವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇವಲ 30 ಮಕ್ಕಳ ಹಾಜರಾತಿ ಇದೆ. ಆದರೆ ನಾಲ್ಕು ಜನ ಶಿಕ್ಷಕರಿದ್ದಾರೆ. ಇಲ್ಲಿ 230 ಮಕ್ಕಳಿಗೆ ಕೇವಲ ನಾಲ್ಕು ಜನ ಶಿಕ್ಷಕರಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾಸಿಮಾಡ ಗ್ರಾಮಕ್ಕೆ ಹೆಚ್ಚುವರಿ ಶಿಕ್ಷಕರನ್ನು ನೇಮಿಸಬೇಕು’ ಎಂದು ಮುಖಂಡ ಬಸವರಾಜ ಬಿರಾದಾರ ಒತ್ತಾಯಿಸಿದ್ದಾರೆ.

‘ಒಂದು ವಾರದೊಳಗೆ ಹೆಚ್ಚುವರಿ ಶಿಕ್ಷಕರನ್ನು ನೇಮಿಸಬೇಕು. ಇಲ್ಲದಿದ್ದರೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು’ ಎಂದು ಗ್ರಾಮಸ್ಥರಾದ ಶಿವಶಂಕರ ಬಿರಾದಾರ, ಪ್ರವೀಣ, ಅನಿಲ ಪಾಟೀಲ, ಬಾಬುರಾವ್ ಪಾಟೀಲ, ರಾಜಶೇಖರ ಶೇರಿಕಾರ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.