ADVERTISEMENT

ಬೀದರ್ ವಿಧಾನಸಭಾ ಕ್ಷೇತ್ರ: ಶಾಸಕ ರಹೀಂಖಾನ್ ಶಕ್ತಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2023, 12:29 IST
Last Updated 19 ಏಪ್ರಿಲ್ 2023, 12:29 IST
ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ರಹೀಂ ಖಾನ್ ಅವರು ನಾಮಪತ್ರ ಸಲ್ಲಿಸಲು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು
ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ರಹೀಂ ಖಾನ್ ಅವರು ನಾಮಪತ್ರ ಸಲ್ಲಿಸಲು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು   

ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ನಗರದಲ್ಲಿ ಬುಧವಾರ ಶಕ್ತಿ ಪ್ರದರ್ಶನ ಮಾಡಿದರು.

ಸಾವಿರಾರು ಕಾಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಉಮೇದುವಾರಿಕೆ ಸಲ್ಲಿಸಿದರು.

ಚೌಬಾರಾದಿಂದ ಗಾವಾನ್ ಚೌಕ್, ಮುಖ್ಯ ರಸ್ತೆ, ಶಹಾಗಂಜ್ ಕಮಾನ್, ಕ್ರಾಂತಿ ಗಣೇಶ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಅಭ್ಯರ್ಥಿ ರಹೀಂಖಾನ್, ಮುಖಂಡ ಅಬ್ದುಲ್ ಮನ್ನಾನ್ ಸೇಠ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬಿಡಿಎ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಮೊದಲಾದವರು ಅಲಂಕೃತ ವಾಹನದಲ್ಲಿ ಇದ್ದರು. ಕೈಬೀಸಿ ಬೆಂಬಲಿಗರಲ್ಲಿ ಜೋಶ್ ತುಂಬಿದರು.

ಬಾಜಾ ಭಜಂತ್ರಿ ಮೆರವಣಿಗೆಗೆ ಕಳೆ ತಂದುಕೊಟ್ಟವು. ಮೆರವಣಿಗೆ ಉದ್ದಕ್ಕೂ ಪಟಾಕಿಗಳ ಸುರಿಮಳೆಯೇ ಆಯಿತು.

ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಶಾಸಕ ರಹೀಂಖಾನ್ ಅವರಿಗೆ ಮಾಲಾರ್ಪಣೆ ಮಾಡಿ, ಸ್ವಾಗತಿಸಿ ಬರಮಾಡಿಕೊಂಡರು. ರಹೀಂಖಾನ್ ಅವರಿಗೆ ಜಯವಾಗಲಿ ಎನ್ನುವ ಘೋಷಣೆಗಳನ್ನು ಮೊಳಗಿಸಿದರು.
ಕಾರ್ಯಕರ್ತರು ಪ್ರಖರ ಬಿಸಿಲನ್ನೂ ಲೆಕ್ಕಿಸದೆ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

‘ಅಲ್ಪಸಂಖ್ಯಾತರ ವಿರೋಧಿ ನೀತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಅಲ್ಪಸಂಖ್ಯಾತರ ವಿರೋಧಿ ನೀತಿ ಅನುಸರಿಸುತ್ತಿವೆ. ಮೀಸಲಾತಿ ರದ್ದುಪಡಿಸಿವೆ’ ಎಂದು ಶಾಸಕ ರಹೀಂಖಾನ್ ಆರೋಪಿಸಿದರು.

‘ಈಗಿನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ 15 ವರ್ಷ ಬಿಜೆಪಿಯಲ್ಲಿದ್ದರು. ಬಿಜೆಪಿ ಸರ್ಕಾರದ ನೀತಿಗಳನ್ನು ಬೆಂಬಲಿಸಿದ್ದರು. ಅಭಿನಂದನೆ ಸಲ್ಲಿಸಿದ್ದರು. ಕಾರಣ, ಅಲ್ಪಸಂಖ್ಯಾತರು ಎಚ್ಚರಿಕೆ ವಹಿಸಬೇಕು. ಮತಗಳ ವಿಭಜನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
‘ಮೂರು ಅವಧಿಗೆ ಶಾಸಕನಾಗಿ ಬೀದರ್ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕ್ಷೇತ್ರವನ್ನು ಮಾದರಿ ಮಾಡಲು ಮತದಾರರು ಮತ್ತೊಮ್ಮೆ ಅವಕಾಶ ಕೊಡಬೇಕು’ ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ‘ಬಿಜೆಪಿ ಹಾಗೂ ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಮತದಾರರು ಎರಡೂ ಪಕ್ಷಗಳಿಗೆ ಚುನಾವಣೆಯಲ್ಲಿ ಅವಕಾಶ ಕೊಡಬಾರದು’ ಎಂದರು.

‘ರಹೀಂಖಾನ್ ಅವರ ನಾಮಪತ್ರ ಸಲ್ಲಿಕೆಗೆ ಸರ್ವ ಸಮುದಾಯಗಳ ಜನ ಅಪಾರ ಸಂಖ್ಯೆಯಲ್ಲಿ ಬಂದಿರುವುದನ್ನು ಗಮನಿಸಿದರೆ ಅವರು ಭಾರಿ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ’ ಎಂದು ಖಂಡ್ರೆ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.