ADVERTISEMENT

ವಿದ್ಯಾರ್ಥಿ ವೇತನ ಬಿಡುಗಡೆಗೆ ಎಸ್‌ಎಫ್‌ಐ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 16:39 IST
Last Updated 24 ಜುಲೈ 2024, 16:39 IST
ಭಾರತ ವಿದ್ಯಾರ್ಥಿ ಫೆಡರೇಶನ್‌ ಪದಾಧಿಕಾರಿಗಳು ಬೀದರ್‌ನಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಭಾರತ ವಿದ್ಯಾರ್ಥಿ ಫೆಡರೇಶನ್‌ ಪದಾಧಿಕಾರಿಗಳು ಬೀದರ್‌ನಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್‌: ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ವಿದ್ಯಾರ್ಥಿನಿ ವೇತನ ಬಿಡುಗಡೆಗೊಳಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಆಗ್ರಹಿಸಿದೆ.

ಈ ಸಂಬಂಧ ಫೆಡರೇಶನ್‌ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿದರು.

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿಲ್ಲ. ಫೆಲೋಶಿಪ್‌ ವಿತರಣೆಗೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದರಿಂದ ವಿದ್ಯಾರ್ಥಿ ಸಮುದಾಯಕ್ಕೆ ತೊಂದರೆ ಆಗುತ್ತಿದೆ. ರಾಜ್ಯ ಸರ್ಕಾರ ಅನುದಾನ ಬಿಡುಗಡೆಗಳಿಸದೇ ಇರುವುದು ಖಂಡನಾರ್ಹ. ಈ ಸಂಬಂಧ ಹಲವು ಸಲ ಸರ್ಕಾರಕ್ಕೆ ಮನವಿ ಮಾಡಿದರೂ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ, ಈ ವರ್ಷ ಸರ್ಕಾರ ಅದನ್ನು ಕೈಬಿಟ್ಟಿದೆ. ಅದಕ್ಕೆ ₹6 ಲಕ್ಷ ಆದಾಯದ ಮಿತಿ ನಿಗದಿಪಡಿಸಿದೆ. ಹಿಂದೆ ಈ ರೀತಿಯ ಯಾವುದೇ ನಿರ್ಬಂಧ ಇರಲಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ಮಾಸಿಕ ಫೆಲೋಶಿಪ್‌ ಕೂಡ ಕಡಿತ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಕೋವಿಡ್‌ ನೆಪವೊಡ್ಡಿ ಫೆಲೋಶಿಪ್‌ ₹25 ಸಾವಿರದಿಂದ ₹10ಕ್ಕೆ ಇಳಿಸಿತ್ತು. ಕಾಂಗ್ರೆಸ್‌ ಸರ್ಕಾರ ಅದನ್ನು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು. ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಬರುವ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಅರುಣ್‌ ಕೋಡಗೆ, ಜಿಲ್ಲಾ ಕಾರ್ಯದರ್ಶಿ ರೋಶನ್‌ ಮಲ್ಕಾಪೂರೆ, ಜಿಲ್ಲಾ ಉಪಾಧ್ಯಕ್ಷರಾದ ಅಮರ ಗಾದಗಿ, ನಾಗರಾಜ ಹೊನ್ನ, ಅವಿನಾಶ್‌ ಬುಧೇರಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.