ಬೀದರ್: ಕೇಂದ್ರದ ಹೊಸ ಕೃಷಿ ಕಾಯ್ದೆಗಳ ವಾಪಸ್‍ಗೆ ಒತ್ತಾಯಿಸಿ ಕಾಂಗ್ರೆಸ್ ಜ. 20 ರಂದು ಬೆಂಗಳೂರಿನಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಿದೆ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.
ಕಾಯ್ದೆಗಳ ವಿರುದ್ಧ ಮೊದಲ ಹಂತದಲ್ಲಿ ರಾಜ್ಯಮಟ್ಟದ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿಭಾಗ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲೂ ಪ್ರತಿಭಟನೆ ಮಾಡಲಾಗುವುದು ಎಂದು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ಈಗಾಗಲೇ ಸುಪ್ರೀಂ ಕೋರ್ಟ್ ಮೂರು ಕಾಯ್ದೆಗಳಿಗೆ ತಡೆ ನೀಡಿದೆ. ಆದರೂ, ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತಕ್ಕಾಗಿ ಕಾಯ್ದೆ ರೂಪಿಸಲಾಗಿದೆ ಎಂದು ಹೇಳುತ್ತಿರುವುದು ಅಪಹಾಸ್ಯವಾಗಿದೆ ಎಂದು ಟೀಕಿಸಿದರು.
ನೂತನ ಕೃಷಿ ಕಾಯ್ದೆಗಳಿಂದ ದೈತ್ಯ ಕಂಪನಿಗಳು ಲಾಭ ಮಾಡಿಕೊಳ್ಳಲಿದ್ದು, ರೈತರಿಗೆ ಅನ್ಯಾಯ ಆಗಲಿದೆ. ಹೀಗಾಗಿ ಕೂಡಲೇ ಕಾಯ್ದೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಸರ್ಕಾರವಾಗಿದೆ. ಕೇಂದ್ರ ಸಚಿವರಿಗೆ ಸ್ವತಂತ್ರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಇಲ್ಲ ಎಂದು ಆಪಾದಿಸಿದರು.
ಕಲಬುರ್ಗಿಯಲ್ಲಿ ಸೋಮವಾರ ನಡೆಯಲಿರುವ ಕಾಂಗ್ರೆಸ್ ವಿಭಾಗೀಯ ಸಂಕಲ್ಪ ಸಮಾವೇಶದಲ್ಲಿ ಪಕ್ಷದ ಸಂಘಟನೆ ಬಲವರ್ಧನೆ ಜತೆಗೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ, ಕೇಂದ್ರದ ರೈತ ವಿರೋಧಿ ಕಾಯ್ದೆಗಳು, ರೈತರ ರಕ್ಷಣೆ ವಿಷಯಗಳೂ ಚರ್ಚೆಗೆ ಬರಲಿವೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆ ಯಾಗಿದ್ದಾರೆ. ವಾರದೊಳಗೆ ವಿಧಾನ ಸಭಾ ಉಪ ಚುನಾವಣೆ ಘೋಷಣೆಯಾ ಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ ಅರಳಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ ಸುದ್ದಿಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.