ADVERTISEMENT

ಏಪ್ರಿಲ್ 21ಕ್ಕೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ

ನೌಕರರ ಬೇಡಿಕೆಗೆ ಸ್ಪಂದನೆ: ರಾಜೇಂದ್ರಕುಮಾರ ಗಂದಗೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 14:00 IST
Last Updated 22 ಜನವರಿ 2021, 14:00 IST
ರಾಜೇಂದ್ರಕುಮಾರ ಗಂದಗೆ
ರಾಜೇಂದ್ರಕುಮಾರ ಗಂದಗೆ   

ಬೀದರ್: ‘ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಪ್ರತಿ ವರ್ಷ ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರಿ ನೌಕರರ ದಿನ ಆಚರಣೆಯ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಹೇಳಿದ್ದಾರೆ.

‘ನೌಕರರ ದಿನ ಆಚರಣೆಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ನಡೆಸಿದ ನಿರಂತರ ಪ್ರಯತ್ನ ಫಲ ನೀಡಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಸರ್ಕಾರ ವಿವಿಧ ಕಾರ್ಯಕ್ರಮಗಳೊಂದಿಗೆ ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಸರ್ಕಾರಿ ನೌಕರರ ದಿನ ಆಚರಿಸಲಿದೆ. ಮಾದರಿ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಜನವರಿ 26 ರಂದು ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೌಕರರ ದಿನದಂದೇ ಪ್ರದಾನ ಮಾಡಲಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರಿ ನೌಕರರು ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ನಿರ್ವಹಿಸುತ್ತಾರೆ. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ. ನೌಕರರ ದಿನ ಆಚರಣೆ ಘೋಷಣೆ ಮೂಲಕ ಸರ್ಕಾರಿ ನೌಕರರನ್ನು ಗೌರವಿಸಿರುವ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ನೌಕರರ ದಿನಾಚರಣೆಯು ನೌಕರರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಿಸಲಿದೆ. ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಪ್ರೇರಣೆಯನ್ನೂ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.